ಕೊರೊನ ವೈರಸ್: ಚೀನಾದಲ್ಲಿದ್ದ ಮಂಡ್ಯದ ವಿದ್ಯಾರ್ಥಿನಿ ರಾಜ್ಯಕ್ಕೆ ವಾಪಸ್

ಸಾಂದರ್ಭಿಕ ಚಿತ್ರ
ಮಂಡ್ಯ, ಫೆ.4: ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಮಂಡ್ಯದ ವಿದ್ಯಾರ್ಥಿನಿ ಕೊರೊನ ವೈರಸ್ ಭೀತಿಯಿಂದ ರಾಜ್ಯಕ್ಕೆ ವಾಪಸ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲಾಗಿದೆ.
ವಿದ್ಯಾರ್ಥಿಯನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ಸೋಂಕು ಕಂಡುಬಂದಿಲ್ಲ. ಒಂದು ವಾರ ಕಾಲ ವೈದ್ಯರು ಮನೆಗೆ ಭೇಟಿ ನೀಡಿ ತಪಾಸಣೆ ಮಾಡಲಿದ್ದಾರೆ. ಜತೆಗೆ ಕೆಲವು ದಿನಗಳವರೆಗೆ ಮನೆಯಿಂದ ಹೊರಗೆ ಬರದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಚೇಗೌಡ ಮಾಹಿತಿ ನೀಡಿದರು.
ಆಕೆಯ ಮನೆಯ ಸುತ್ತಮುತ್ತ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ನಗರದ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್ ವ್ಯವಸ್ಥೆ ಸಹ ಮಾಡಲಾಗಿದೆ. ಔಷಧಿಗಳನ್ನು ಸ್ಟಾಕ್ ಇಟ್ಟುಕೊಂಡಿದ್ದು, ಯಾವುದೇ ರೀತಿಯಲ್ಲಿ ಆತಂಕ ಪಡಬೇಕಿಲ್ಲ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲು ಕೊಠಡಿ ಮತ್ತು ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ. ಆತಂಕ ಪಡಬಾರದೆಂದು ಅವರು ಹೇಳಿದರು.







