ಸ್ವಚ್ಛತಾ ಕಾರ್ಯಕರ್ತರಿಗೆ ಆರೋಗ್ಯ ಕಾರ್ಡ್ ಬಿಡುಗಡೆ

ಉಡುಪಿ, ಫೆ.11: ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುವ ಸ್ವಚ್ಛತಾ ಕಾರ್ಯಕರ್ತರಿಗೆ ಆರೋಗ್ಯ ತಪಾಸಣೆ ನಡೆಸಲು ನೀಡುವ ಆರೋಗ್ಯ ಕಾರ್ಡ್‌ಗಳನ್ನು ಮಂಗಳವಾರ ನಡೆದ ಉಡುಪಿ ಜಿಪಂ ಕೆಡಿಪಿ ಸಭೆಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು ಬಿಡುಗಡೆಗೊಳಿಸಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಸುಮಾರು 50 ಗ್ರಾಪಂ ಗಳಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಚಟುವಟಿಕೆ ಪ್ರಾರಂಭ ವಾಗಿದ್ದು, ಒಟ್ಟು ಸುಮಾರು 100ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ಒಣತ್ಯಾಜ್ಯ ಸಂಗ್ರಹಣೆ ಪ್ರಾರಂಭವಾಗಿದೆ. ಜಿಲ್ಲೆಯ ವಿವಿಧ ಗ್ರಾಪಂನಲ್ಲಿ ಸುಮಾರು 500 ಕ್ಕೂ ಹೆಚ್ಚು ಜನ ಸ್ವಚ್ಛತಾ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಕಾರ್ಯಕರ್ತರಿಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಲಸಿಕೆ, ಔಷಧೋಪಚಾರ ನೀಡುವ ಸಲುವಾಗಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಸಲು ಜಿಪಂ ವತಿಯಿಂದ ಕಾರ್ಯಕ್ರಮ ರೂಪಿಸಲಾಗಿದೆ. ಈ ಸಂಬಂಧ ಆರೋಗ್ಯ ಕಾರ್ಡ್‌ಗಳನ್ನು ಮುದ್ರಿಸಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಪಂಗಳಿಗೆ ಇದನ್ನು ವಿತರಿಸಲಾಗುತ್ತದೆ.
ಈ ಸಂದರ್ದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್ ಮೊದಲಾದವರು ಉಪಸ್ಥಿತರಿದ್ದರು.







