ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕೆಲಸ ನಿರ್ವಹಿಸಿ: ಶ್ಯಾಮಲಾ ಕುಂದರ್

ಮಂಗಳೂರು, ಫೆ.11: ಅಧಿಕಾರಿಗಳು ಕಾನೂನು ಚೌಕಟ್ಟಿನ ಮಿತಿಯೊಳಗೆ ಕೆಲಸ ನಿರ್ವಹಿಸದೆ ಮಾನವೀಯ ನೆಲೆಯಲ್ಲಿ ಜನರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದರು.
ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಎಸ್ಪಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಮಟ್ಟದ ಮಾಸಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಾನೂನುಗಳು ಜನರ ರಕ್ಷಣೆಗೋಸ್ಕರ ಇರುವುದು ಹಾಗಾಗಿ ಜನಸಾಮಾನ್ಯರು ಸಮಸ್ಯೆಯನ್ನು ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಸದುಪಯೋಗಿಸಬೇಕು. ಹಿಂದೆ ಮಹಿಳೆಯರು ಪೊಲೀಸ್ ಠಾಣೆಗೆ ಹೋಗಲು ಭಯಪಡುತ್ತಿದ್ದರು. ಆದರೆ ಇಂದು ಮಹಿಳೆ ಧೈರ್ಯದಿಂದ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವುದನ್ನು ಗಮನಿಸಬಹುದು. ಇದು ಮಹಿಳಾ ಸಬಲೀಕರಣಕ್ಕೆ ಉದಾಹರಣೆ ಯಾಗಿದೆ ಎಂದ ಶ್ಯಾಮಲಾ ಕುಂದರ್, ಪೊಲೀಸ್ ಅಧಿಕಾರಿಗಳು ಜನರ ಸಮಸ್ಯೆಗಳಿಗೆ, ತೊಂದರೆಗಳಿಗೆ ಸ್ಪಂದಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.
ದಲಿತರಿಗೆ ಸರಕಾರಿ ಇಲಾಖೆಯ ಅಧಿಕಾರಿಗಳಿಂದ ದಬ್ಬಾಳಿಕೆ, ಶೋಷಣೆ ಹೆಚ್ಚುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರು ಆಗ್ರಹಿಸಿದರು.
ಜಿಲ್ಲಾ ಪೊಲೀಸ್ ಆಧೀಕ್ಷಕ ಲಕ್ಷ್ಮಿಪ್ರಸಾದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಕ್ರಂ ಅಮಾಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.





