ಉಡುಪಿ: ಫಲಪುಷ್ಪ ಪ್ರದರ್ಶನ-2020ಕ್ಕೆ ಚಾಲನೆ

ಉಡುಪಿ: ಫಲಪುಷ್ಪ ಪ್ರದರ್ಶನ-2020ಕ್ಕೆ ಚಾಲನೆ ಉಡುಪಿ, ಫೆ.29: ಜಿಲ್ಲಾ ತೋಟಗಾರಿಕಾ ಇಲಾಖೆ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನ ರೈತರಿಗೆ ಉತ್ತೇಜನ ನೀಡುವಂತಹ ಕಾರ್ಯಕ್ರಮ. ಉಡುಪಿ ತೋಟಗಾರಿಕಾ ಜಿಲ್ಲೆ ಎಂಬ ಖ್ಯಾತಿಯನ್ನು ಪಡೆಯಲು ತೋಟಗಾರಿಕೆ ಮತ್ತು ಕೃಷಿ ಇಲಾಖೆ ಹಮ್ಮಿಕೊಂಡಿರುವ ಈ ಪ್ರದರ್ಶನ ಕಾರಣ ವಾಗಲಿ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ್ ಬಾಬು ಹಾರೈಸಿದ್ದಾರೆ.
ಶನಿವಾರ ಜಿಲ್ಲಾಡಳಿತ, ಜಿಲ್ಲಾ ತೋಟಗಾರಿಕಾ ಇಲಾಖೆ ಮತ್ತುಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತ ಸಹಯೋಗದಲ್ಲಿ ದೊಡ್ಡಣ್ಣ ಗುಡ್ಡೆಯ ತೋಟಗಾರಿಕಾ ಕೇಂದ್ರದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳ ಲಾದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನವನ್ನು ಉ್ಘಾಟಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಈ ಹಿಂದೆಯೂ ಕೃಷಿ ಮೇಳ, ಹಲಸು ಮೇಳದಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯೂ ದೊರಕಿದೆ. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆದು ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತಾ ಗಬೇಕು ಎಂದರು.
ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ತೋಟಗಾರಿಕಾ ಇಲಾಖೆ ಈ ಪ್ರದರ್ಶನದೊಂದಿಗೆ ರೈತರ ಸಂತೆಯನ್ನೂ ಏರ್ಪಡಿಸಿದರೆ ರೈತರಿಗೆ ಹೆಚ್ಚಿನ ಅನುಕೂಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಕೃಷಿಯ ಬಗ್ಗೆ ಮಾಹಿತಿ ನೀಡುವ ಮೂರು ಕಿರು ಹೊತ್ತಗೆಗಳನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀತಿ ಗೆಹ್ಲೋಟ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯಕ್ ಉಪಸ್ಥಿತರಿದ್ದರು.
ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ಸ್ವಾಗತಿಸಿದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ನಿಧೀಶ್ ಕೆ. ವಂದಿಸಿದರು.








