‘ಮಹದಾಯಿ’ ಕಣಕುಂಬಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ
‘ಯೋಜನೆ ತ್ವರಿತ ಅನುಷ್ಠಾನಕ್ಕೆ ಅಗತ್ಯ ಕ್ರಮ’
ಬೆಂಗಳೂರು, ಫೆ. 29: ಮಹದಾಯಿ ಯೋಜನೆಗೆ ಕೇಂದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಕಣಕುಂಬಿಗೆ ಕಳಸಾ-ಬಂಡೂರು ನಾಲಾ ಪ್ರದೇಶಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶನಿವಾರ ಜಲಸಂಪನ್ಮೂಲ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಮಹದಾಯಿ ಹೋರಾಟಗಾರರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ರಮೇಶ್ ಜಾರಕಿಹೊಳಿ, ಮಹದಾಯಿ ಯೋಜನೆ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಅನುದಾನ ಮೀಸಲಿಗೆ ಒತ್ತಾಯ: ಮಹದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ರಾಜ್ಯದ ಪಾಲಿನ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಅಣೆಕಟ್ಟು ನಿರ್ಮಾಣ, ವಿದ್ಯುತ್ ಉತ್ಪಾದನೆ ಮತ್ತು ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೈಗೊಳ್ಳಲು ಬಜೆಟ್‌ನಲ್ಲಿ ಹಣ ಮೀಸಲಿಡಲು ಸಿಎಂಗೆ ಮನವಿ ಮಾಡಲಾಗುವುದು ಎಂದರು.
ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದರಿಂದ ಕಾಮಗಾರಿ ಸ್ಥಗಿತವಾಗಿತ್ತು. ನಾಲ್ಕು ದಶಕಗಳ ಉತ್ತರ ಕರ್ನಾಟಕ ಭಾಗದ ರೈತರು, ವಿವಿಧ ಸಂಘಟನೆಗಳ ಹೋರಾಟದ ಫಲವಾಗಿ ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ಶೀಘ್ರ ಕಾರ್ಯರೂಪಕ್ಕೆ ತರುತ್ತೇವೆ ಎಂದರು.
ಮಹದಾಯಿ ಯೋಜನೆ ವಿಚಾರದಲ್ಲಿ ರಾಜ್ಯ ಸರಕಾರ ಯಾವುದೇ ರಾಜಕೀಯ ಮಾಡುವುದಿಲ್ಲ. ಇಲ್ಲಿ ಯಾವ ಪಕ್ಷ, ಜಾತಿಯೂ ಇಲ್ಲ. ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದ ರಮೇಶ್ ಜಾರಕಿಹೊಳಿ, ನೀರಾವರಿ ವಿಚಾರಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು.







