ರಸ್ತೆಗಳ ಅಭಿವೃದ್ಧಿಗೆ 1500 ಕೋಟಿ ರೂ.ಬಿಡುಗಡೆ: ಕೆ.ಎಸ್.ಈಶ್ವರಪ್ಪ

ಬಳ್ಳಾರಿ, ಫೆ.29: ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಜಲಪ್ರಳಯದ 103 ತಾಲೂಕುಗಳಲ್ಲಿ ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರಕಾರದಿಂದ 1500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಘನತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿರುವ 6021 ಗ್ರಾಮಪಂಚಾಯತಿಗಳಲ್ಲಿ 3 ಸಾವಿರಕ್ಕೂ ಹೆಚ್ಚು ಗ್ರಾಮಪಂಚಾಯತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಕ್ರಮ ವಹಿಸಲಾಗುವುದು. 1281 ಗ್ರಾ.ಪಂ.ಗಳಲ್ಲಿ ಘನತ್ಯಾಜ್ಯ ಸಂಗ್ರಹ ಮತ್ತು ನಿರ್ವಹಣೆಗೆ ಅನುಮೋದನೆ ನೀಡಲಾಗಿದೆ. ನಮ್ಮ ಇಲಾಖೆಯಲ್ಲಿ ಯಾವುದೆ ರೀತಿಯ ಹಣದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ-ಟಿಪ್ಪಣಿಗಳು ಸಹಜ. ಯಾರು ಕೂಡ ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಡುವಿನ ವಾಗ್ವಾದ ಪ್ರಕರಣದ ಕುರಿತು ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ವಿಧಾನಮಂಡಲ ಇರುವುದು ಜನರ ಸಮಸ್ಯೆಗಳನ್ನು ಚರ್ಚಿಸಲು. ಆದರೆ, ಮಾಜಿ ಮುಖ್ಯಮಂತ್ರಿಯೊಬ್ಬರು ಇದೇ ವಿಚಾರವನ್ನು ಮುಂದಿಟ್ಟುಕೊಂಡು ವಿಧಾನಸಭೆಯ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಹೇಳಿರುವುದು ಗೂಂಡಾಯಿಸಂ. ಇದು ನಮ್ಮ ರಾಜ್ಯದಲ್ಲಿ ನಡೆಯುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.
ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಶಾಸಕ ನಾಗೇಂದ್ರ ಇದ್ದರು.







