ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿ ಸಭೆ

ಉಡುಪಿ, ಮಾ. 2: ಹಂಗಾರಕಟ್ಟೆಯ ಚೇತನಾ ಪ್ರೌಢಶಾಲೆಯಲ್ಲಿ ಮಾ.14 ಮತ್ತು 15ರಂದು ನಡೆಯುವ ಉಡುಪಿ ಜಿಲ್ಲಾ 14ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರು ಅವರ ಅಧ್ಯಕ್ಷತೆಯಲ್ಲಿ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ನಡೆಯಿತು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಪೊಲೀಸ್, ಅಗ್ನಿಶಾಮಕ ಹಾಗೂ ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಕ್ರಮ ಗಳನ್ನು ಕೈಗೊಳ್ಳುವಂತೆ ಸಂಬಂದಪಟ್ಟ ಇಲಾಖೆಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲ್ಯ ನೀಡುವ ಕುರಿತಂತೆ ಹಾಗೂ ಸಮ್ಮೇಳನಕ್ಕೆ ಆಸಕ್ತ ಶಾಲಾ ಮಕ್ಕಳನ್ನು ಕರೆತರುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಮ್ಮೇಳನದಲ್ಲಿ ಸುಮಾರು 2000 ಮಂದಿ ಭಾಗವಹಿಸಲಿದ್ದು, ಅವರ ಊಟೋಪಚಾರದ ಕುರಿತಂತೆ ಜಿಲ್ಲೆಯ ದೇವಾಲಯ ಗಳಿಂದ ಅಗತ್ಯ ನೆರವು ನೀಡಲಾಗುವುದು ಎಂದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಘಟಕರಿಗೆ ಸೂಚಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಪ್ರಸಿದ್ದ ಸಾಹಿತಿ ವೈದೇಹಿ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಕವಿಗೋಷ್ಠಿ, ವಿದ್ಯಾರ್ಥಿ ಗೋಷ್ಠಿ ಸೇರಿದಂತೆ ವಿವಿಧ ಗೋಷ್ಠಿಗಳು ಮತ್ತು ಚರ್ಚೆಗಳು ನಡೆಯಲಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದಯ್ಯರೇ ದಯ್ಯ’ ಜನಪದ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದರು.
ಸಭೆಯಲ್ಲಿ ಎಎಸ್ಪಿ ಕುಮಾರ ಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರಬೆಕ್ಕೇರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ, ಸಂಘಟನಾ ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ, ಕಾಪು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪುಂಡಲೀಕ ಮರಾಠೆ, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಬಾಕರ ಶೆಟ್ಟಿ, ಬ್ರಹ್ಮಾವರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಜ್ಯೋತಿ ಗುರುಪ್ರಸಾದ್, ಭುವನ ಪ್ರಸಾದ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.







