ಗಾಂಜಾ ಮಾರಾಟ: ಆರೋಪಿ ಸೆರೆ; ಸೊತ್ತು ವಶಕ್ಕೆ

ಮಂಗಳೂರು, ಮಾ.2: ಪಡುಶೆಡ್ಡೆ ಗ್ರಾಮದ ಮಂಜಲಪಾದೆ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕಾವೂರು ಪೊಲೀಸರು ಬಂಧಿಸಿದ್ದು, ಆತನಿಂದ 26 ಸಾವಿರ ರೂ. ಮೌಲ್ಯದ 1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮೂಡುಶೆಡ್ಡೆಯ ಪಿಲಿಕುಳ ನಿವಾಸಿ ಮುಹಮ್ಮದ್ ಮುಸ್ತಫಾ (22) ಬಂಧಿತ ಆರೋಪಿ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಕಾರ್ಯಾಚರಣೆ ಸಂದರ್ಭ ಮತ್ತೋರ್ವ ಆರೋಪಿ ವಾಮಂಜೂರಿನ ಮುಹಮ್ಮದ್ ರಾಯಿಲ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮುಸ್ತಫಾ ವಿರುದ್ಧ ಉಳ್ಳಾಲ ಮತ್ತು ಬರ್ಕೆ ಪೊಲೀಸ್ ಠಾಣೆಗಳಲ್ಲಿ ಗಾಂಜಾ ಮಾರಾಟ ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಮತ್ತು ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ. ಪರಾರಿಯಾಗಿರುವ ರಾಯಿಲ್ ವಿರುದ್ಧವೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ ಪ್ರಕರಣಗಳಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





