ಪಿಯು ಪರೀಕ್ಷೆ ಆರಂಭಗೊಂಡ ಒಂದು ಗಂಟೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಪತ್ರಿಕೆ ವೈರಲ್!
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪ್ರಶ್ನೆಪತ್ರಿಕೆಯ ಫೋಟೊ
ವಿಜಯಪುರ, ಮಾ.4: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಾರಂಭಗೊಂಡ ಒಂದೇ ಗಂಟೆಯಲ್ಲಿ ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ.
ಬುಧವಾರ ಮೊದಲ ದಿನದ ಪರೀಕ್ಷೆ ಆರಂಭಗೊಂಡ ಒಂದೇ ಗಂಟೆಯಲ್ಲಿ ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ. ಇಂಡಿ ಪಟ್ಟಣದ ಪರೀಕ್ಷಾ ಕೇಂದ್ರವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಕೈಗೆ ಪ್ರಶ್ನಪತ್ರಿಕೆ ಸಿಕ್ಕ ಬಳಿಕ ಅದನ್ನು ಯಾರೋ ಕಿಟಕಿಯ ಮೂಲಕ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಅಥವಾ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದ್ದರೂ ಈ ಕೃತ್ಯ ನಡೆದಿರುವುದನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಪ್ರಶ್ನೆಪತ್ರಿಕೆ ಬಹಿರಂಗಪಡಿಸಿರುವ ಈ ಕೃತ್ಯವನ್ನು ಪರೀಕ್ಷಾ ಅಕ್ರಮವೆಂದು ಪರಿಗಣಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಶಿಕ್ಷಣ ಕಾಯ್ದೆ ಸೆಕ್ಷನ್ 24(ಎ) ಪ್ರಕಾರ ಮತ್ತು ಇತರ ಕಾನೂನಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.





