ಅಭಿವೃದ್ಧಿಗೆ ಒತ್ತು ನೀಡಿರುವ ದೂರದೃಷ್ಟಿಯ ಬಜೆಟ್: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಮಾ. 5: ಕೃಷಿ-ನೀರಾವರಿಗೆ ಒತ್ತು ನೀಡಿರುವ, ರೈತರ ಆರ್ಥಿಕತೆ ಬಲಪಡಿಸುವ, ಕೃಷಿಯ ಗಟ್ಟಿ ನೆಲೆಗಟ್ಟಿನ ಮೇಲೆ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ದೂರದೃಷ್ಟಿಯುಳ್ಳ ಬಜೆಟ್ ಇದಾಗಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಉತ್ತೇಜನಕ್ಕಾಗಿ ಭೂ ಮತ್ತು ಜಲ ಸಂರಕ್ಷಣೆಗೆ ಒತ್ತು ನೀಡಲಾಗಿದೆ. ಏತ ನೀರಾವರಿಗೆ 5 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ಮಳೆಯಾಧಾರಿತ ಕೃಷಿ ಯೋಜನೆ ರೂಪಿಸಲಾಗಿದೆ. ಹಾಗೆಯೇ ಆಡಳಿತ ಸುಧಾರಣೆಗೆ ಹಲವು ಯೋಜನೆ ಜಾರಿ ಮಾಡಲಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕೆಲ ಇಲಾಖೆಗಳ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದ್ದು, 500 ಕೋಟಿ ರೂ.ಮೀಸಲಿಡಲಾಗಿದೆ. ಮಹಾದಾಯಿ ಯೋಜನೆಗೆ 500 ಕೋಟಿ ರೂ, ಎತ್ತಿನಹೊಳೆಗೆ 1,500 ಕೋಟಿ ರೂ. ನೀಡಲಾಗಿದ್ದು, 2 ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಕೃಷಿ ಮತ್ತು ನೀರಾವರಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳಾ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗಿದೆ ಎಂದ ಅವರು, ರೈತರ ಸಾಲಮನ್ನಾ ಬಗ್ಗೆ ಅಧಿವೇಶನದಲ್ಲಿಯೇ ಸ್ಪಷ್ಟನೆ ನೀಡಲಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ಹಿರಿಯ ಅಧಿಕಾರಿಗಳಾದ ಐಎನ್‌ಎಸ್ ಪ್ರಸಾದ್, ಏಕ್‌ರೂಪ್ ಕೌರ್, ಮುಖ್ಯಮಂತ್ರಿಗಳ ಸಲಹೆಗಾರ ಲಕ್ಷ್ಮೀನಾರಾಯಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸಿದ್ದರಾಮಪ್ಪ ಸೇರಿ ಇನ್ನಿತರರು ಹಾಜರಿದ್ದರು.







