ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಸಂಖ್ಯೆ ಏರಿಕೆ: ಸಿ.ಎಂ.ಜೋಶಿ

ಉಡುಪಿ, ಮಾ.7: ಲಿಂಗ ಸಮಾನತೆಯ ಅನುಷ್ಠಾನದಲ್ಲಿ ನಾವು ಈಗಾಗಲೇ ಅನೇಕ ಹೆಜ್ಜೆಗಳನ್ನು ಇಟ್ಟಿದ್ದೇವೆ. ದೇಶದ ಸಂವಿಧಾನ ಮತ್ತು ಕಾನೂನುಗಳು ಕೂಡ ಈ ದಿಸೆಯಲ್ಲಿ ಹಿಂದೆ ಬಿದ್ದಿಲ್ಲ. ಇಂದು ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಮಹಿಳೆಯರ ಸಂಖ್ಯೆ ಸಾಕಷ್ಟು ಏರಿಕೆಯಾಗಿದೆ ಎಂದು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ ಹೇಳಿದ್ದಾರೆ.
ಉಡುಪಿ ವಕೀಲರ ಸಂಘ ಮತ್ತು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ಶನಿವಾರ ಕೋರ್ಟ್ ಆವರಣದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನಾಚರೆಯಲ್ಲಿ ಅವರು ಮಾತನಾಡುತಿದ್ದರು.
ಇಂದು ಪ್ರಧಾನ ಮಂತ್ರಿ, ರಾಷ್ಟ್ರಪತಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರನ್ನು ಕಾಣಬಹುದಾಗಿದೆ. ಆದರೂ ನಮ್ಮ ಮುಂದೆ ಸಾಕಷ್ಟು ಸವಾಲುಗಳು ಇವೆ. ಈ ಮಧ್ಯೆ ಸಮಾಜವನ್ನು ಯಾವ ರೀತಿ ಮುಂದಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮವನ್ನು ಮಂಗಳೂರಿನ ಸೆಂಟರ್ ಫಾರ್ ಡೆವಲಪ್‌ಮೆಂಟ್ ಸ್ಟಡೀಸ್ ಆ್ಯಂಡ್ ಎಜ್ಯುಕೇಶನ್ ಇದರ ನಿರ್ದೇಶಕಿ ಡಾ.ರೀಟಾ ನೊರೊನ್ಹ ಉದ್ಘಾಟಿಸಿದರು. ನ್ಯಾಯಾಧೀಶರಾದ ಲಾವಣ್ಯ, ನಿರ್ಮಲಾ, ಭವಾನಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ವಕೀಲರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಕಾರ್ಯದರ್ಶಿ ರೋನಾಲ್ಡ್ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಹಿರಿಯ ನ್ಯಾಯವಾದಿ ಗೀತಾ ಕೌಶಿಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ವಂದಿಸಿದರು. ನ್ಯಾಯವಾದಿಗಳಾದ ನಿಶ್ಮಿತ ಸನಿಲ್ ಮತ್ತು ದೀಪಾ ಕೆ. ಕಾರ್ಯಕ್ರಮ ನಿರೂಪಿಸಿದರು.







