ನಾನು ಅಧಿಕಾರಕ್ಕೆ ಬರುವ ಮುಂಚೆಯೇ ಸಮಸ್ಯೆಗಳಿತ್ತು: ಯಡಿಯೂರಪ್ಪ

ಬೆಂಗಳೂರು, ಮಾ.9: ನಾನು ಅಧಿಕಾರಕ್ಕೆ ಬರುವ ಮುಂಚೆಯೇ ಹಲವು ಸಮಸ್ಯೆಗಳಿತ್ತೇ ಹೊರತು, ನಾನು ಬಂದ ಮೇಲೆ ಅಲ್ಲ. ಆದರೂ, ಎಲ್ಲವನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೋಮವಾರ ವಿಧಾನ ಪರಿಷತ್‌ನಲ್ಲಿ ಮಧ್ಯಾಹ್ನ ಭೋಜನ ನಂತರ ಆರಂಭವಾದ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಅವರು ಮಾತನಾಡಿದರು.
ಕಳೆದ ಸರಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನು ಸ್ಥಗಿತಗೊಳಿಸಿದರೆ ಪ್ರಶ್ನೆ ಮಾಡಬಹುದಾಗಿದೆ. ಆದರೆ, ಕಳೆದ ಅವಧಿಯಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೆ ಈಗ ಅನುದಾನ ನೀಡಿ ಎಂದು ಕೇಳಲಾಗುತ್ತಿದೆ. ಇದಕ್ಕೆ ಏನೆಂದು ಉತ್ತರಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಕಳೆದ ಆರೂವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸರಕಾರಗಳು ಭದ್ರಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ ಅನುದಾನ ಮೀಸಲಿಡಿಸಿರಲಿಲ್ಲ. ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಯೋಜನೆ ಅಭಿವೃದ್ಧಿಗೆ ಸಲಹೆಗಳನ್ನು ನೀಡಲಾಗುತ್ತಿದೆ. ಹೀಗಾದಲ್ಲಿ ಯೋಜನೆ ಜಾರಿ ಮಾಡುವುದಾದರೂ ಹೇಗೆ ಎಂಬ ಯಕ್ಷ ಪ್ರಶ್ನೆ ನನ್ನನ್ನು ಕಾಡುತ್ತಿದೆ ಎಂದರು.
20 ಹಳ್ಳಿಗಳ ಸ್ಥಳಾಂತರ
ಭದ್ರಾ ಮೇಲ್ದಂಡೆಯ ಮೂರನೇ ಹಂತದ ಕಾಮಗಾರಿಗೆ ಪ್ರಸಕ್ತ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿರಲಿಲ್ಲ. ಆದರೂ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ 10 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಲದೆ, ಹಂತ ಹಂತವಾಗಿ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು 20 ಹಳ್ಳಿಗಳನ್ನು ಸ್ಥಳಾಂತರ ಮಾಡಬೇಕಾಗಿದ್ದು, ಆ ಭಾಗದ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು.
ರಾಜ್ಯದ ರೈತರ ಸರ್ವೋತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ನೀರಾವರಿ ಮತ್ತು ಕೃಷಿಗೆ ಆದ್ಯತೆ ನೀಡಲಾಗಿದೆ. ಅಲ್ಲದೇ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಹೈದರಾಬಾದ್- ಕರ್ನಾಟಕ ಎಂಬ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಇದು 371ಜೆ ಕಲಂ ತೀವ್ರಗತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.
ಬೀದರ್ ಮತ್ತು ಕಲಬುರಗಿ ವಿಮಾನ ನಿಲ್ದಾಣ ಕಲ್ಯಾಣ ಕರ್ನಾಟಕ ಭಾಗದ ಆರ್ಥಿಕ ಅಭಿವೃದ್ಧಿಗೆ ವರದಾನವಾಗಿದೆ. ಬಂಡವಾಳದಾರರಿಗೆ ಅಗತ್ಯ ಇರುವುದು ಸಮಯ ನಿರ್ವಹಣೆಯಾಗಿದೆ. ಹೀಗಾಗಿ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಲು ವಿಮಾನ ನಿಲ್ದಾಣಗಳು ಸಹಾಯವಾಗಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.







