ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಪತ್ತೆಯಾಗಿಲ್ಲ: ಡಿಸಿ ಸಿಂಧೂ ಸ್ಪಷ್ಟನೆ

ಮಂಗಳೂರು, ಮಾ.10: ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ 437 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. ಅಲ್ಲದೆ, ನವಮಂಗಳೂರು ಬಂದರ್‌ನಲ್ಲಿ 45 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಯಾವುದೇ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜ.1ರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಲ್ಲಿಯವರೆಗೆ 25,351 ಪ್ರಯಾಣಿಕರನ್ನು ಮತ್ತು ಜ.23ರಿಂದ ಈವರೆಗೆ ಎನ್‌ಎಂಪಿಟಿಯಲ್ಲಿ 5,358 ಮಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು ವಿಭಾಗೀಯ ಜಂಟಿ ನಿರ್ದೇಶಕಿ ಡಾ.ಪುಷ್ಪಲತಾ ಬಿ.ಎಸ್. ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ವ್ಯವಸ್ಥೆಯ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸಲಾಗಿದೆ ಎಂದರು.
ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ, ಗಂಟಲು ನೋವು ಕಂಡುಬಂದಲ್ಲಿ ಕೂಡಲೇ ಟ್ರೋಲ್ ಫ್ರೀ ನಂ. 104/ 1077 ಅಥವಾ ದೂ.ಸಂ.: 0824- 2442590ನ್ನು ಸಂಪರ್ಕಿಸಬಹುದು. ಇಲ್ಲವೇ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಬಹುದು. ಎಲ್ಲ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೇ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾ.11ಕ್ಕೆ ವರದಿ ಕೈಸೇರುವ ಸಾಧ್ಯತೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಂಡುಬಂದಿದ್ದ ಜ್ವರ ಪೀಡಿತ ವ್ಯಕ್ತಿಯ ರಕ್ತ ಮತ್ತು ಗಂಟಲಿನ ದ್ರವವನ್ನು ಬೆಂಗಳೂರು ವೈದ್ಯಕೀಯ ಆಸ್ಪತ್ರೆಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಮಾ.11ರಂದು ವರದಿ ವೈದ್ಯರ ಕೈಸೇರಲಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.







