ಗ್ರಾಮೀಣ ಪ್ರದೇಶದ ಕುಡಿಯುವ ನೀರು ಪೂರೈಕೆಗೆ ಒಂದು ಕೋಟಿ: ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು

ಉಡುಪಿ, ಮಾ.11: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ತುರ್ತಾಗಿ ಕುಡಿಯುವ ನೀರು ಪೂರೈಕೆಯ ಕಾಮಗಾರಿಗಾಗಿ ಜಿಪಂ ಅಧ್ಯಕ್ಷರ ವಿವೇಚನೆ ಯಡಿ ಒಂದು ಕೋಟಿ ರೂ. ಅನುದಾನವನ್ನು ಒದಗಿಸಲಾಗಿದ್ದು, ಈ ಕುರಿತು ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.
ಬುಧವಾರ ಮಣಿಪಾಲ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿ ತುರ್ತಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ವಿರುವ ಕೊಳವೆ ಬಾವಿ, ಹೊಸ ಪೈಪ್ ಲೈನ್ ಕಾಮಗಾರಿ, ದುರಸ್ತಿ, ವಿದ್ಯುತ್ ಸಂಪರ್ಕ ಸೇರಿದಂತೆ ತುರ್ತಾಗಿ ಕೈಗೊಳ್ಳಬಹುದಾದ ಕಾಮಗಾರಿಗಳಿಗಾಗಿ ಒಂದು ಕೋಟಿ ರೂ. ಅನುದಾನವನ್ನು ನೀಡಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಪಂಗಳಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನೈರ್ಮಲ್ಯ ಕುರಿತಂತೆ ಶೌಚಾಲಯಗಳ ನಿರ್ಮಾಣ ಆಗಿದ್ದು, ಜಿಲ್ಲೆಗೆ 25 ಸಮುದಾಯ ಶೌಚಾಲಯ ನಿರ್ಮಾಣದ ಗುರಿ ಇದ್ದು, 19 ಪೂರ್ಣಗೊಂಡಿವೆ. 5 ಕಾಮಗಾರಿ ಪ್ರಗತಿಯಲ್ಲಿವೆ. ಶಾಲಾ ಶೌಚಾಲಯಗಳು 67 ಇದ್ದು, ಮಾರ್ಚ್‌ನಲ್ಲಿ ಪೂರ್ಣಗೊಳ್ಳಲಿವೆ. ತ್ಯಾಜ್ಯ ನಿರ್ವಹಣೆ ಕುರಿತಂತೆ ಎಸ್‌ಎಲ್‌ಆರ್‌ಎಂ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಒಣ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹಸಿತ್ಯಾಜ್ಯ ವನ್ನು ಮನೆಗಳಲ್ಲಿಯೇ ನಿರ್ವಹಣೆ ಮಾಡಲು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ತಿಳಿಸಿದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಪಿ.ರಾಜ ಉಪಸ್ಥಿತರಿದ್ದರು.







