ಶಾಸಕರ ಭೇಟಿಗೆ ಅವಕಾಶ ಕೋರಿ ದಿಗ್ವಿಜಯ್ ಸಿಂಗ್ ಅರ್ಜಿ: ಮಧ್ಯಪ್ರವೇಶಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಮಾ.18: ನಗರದ ಖಾಸಗಿ ರೆಸಾರ್ಟ್‌ನಲ್ಲಿರುವ ಮಧ್ಯಪ್ರದೇಶದ ಶಾಸಕರನ್ನು ತಮಗೆ ಭೇಟಿ ಮಾಡಲು ಅವಕಾಶ ನೀಡಬೇಕೆಂದು ಕೋರಿ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರು ತುರ್ತು ವಿಚಾರಣೆಗೆ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ದಿಗ್ವಿಜಯ್ ಸಿಂಗ್ ಅವರು ರಾಜ್ಯಸಭಾ ಅಭ್ಯರ್ಥಿಯಾಗಿ ಚುನಾವಣಾ ಪ್ರಚಾರ ನಡೆಸುವುದು ಹಾಗೂ ಕಾಂಗ್ರೆಸ್ ಶಾಸಕರಿಂದ ಮತ ಕೇಳುವ ಹಕ್ಕು ನನಗಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. ರೆಸಾರ್ಟ್‌ನಲ್ಲಿರುವ ಶಾಸಕರ ಭೇಟಿಗೆ ಪೊಲೀಸರು ಅಡ್ಡಿಪಡಿಸುತ್ತಿದ್ದು, ಹೀಗಾಗಿ ಸೂಕ್ತ ನಿರ್ದೇಶನವನ್ನು ಪೊಲೀಸರಿಗೆ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ, ಮಧ್ಯಪ್ರದೇಶದ ಶಾಸಕರು ನಮಗೆ ಯಾವುದೇ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಲು ಇಷ್ಟವಿಲ್ಲ ಹಾಗೂ ನಮಗೆ ರಕ್ಷಣೆಯ ಅವಶ್ಯಕತೆ ಇದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ರೂಪದಲ್ಲಿ ಪತ್ರ ಬರೆದಿದ್ದರಿಂದ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯ ವ್ಯಕ್ತಪಡಿಸಿ, ವಿಚಾರಣೆಯನ್ನು ಮುಂದೂಡಿದೆ.
ಬೆಂಗಳೂರಿನ ಯಲಹಂಕ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರು ಉಳಿದುಕೊಂಡಿದ್ದಾರೆ. ಬುಧವಾರ ಬೆಂಗಳೂರಿಗೆ ಆಗಮಿಸಿದ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಪ್ರಯತ್ನಿಸಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ಈ ವೇಳೆ ಪ್ರತಿಭಟನೆ ನಡೆಸಿದ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆಗೊಳಿಸಿದರು. ಪೊಲೀಸರ ನಡೆಯನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರನ್ನು ನೀಡಿದ್ದಾರೆ.
ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಾಯಕರು ಸಭೆಯನ್ನೂ ನಡೆಸಿದ್ದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಇತರ ಮುಖಂಡರ ಜೊತೆಗೆ ದಿಗ್ವಿಜ್ ಸಿಂಗ್ ಮಾತುಕತೆ ನಡೆಸಿದ್ದರು.







