ಕೊರೋನ: ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರ, ರಾಜ್ಯ ಸರಕಾರಕ್ಕೆ ಡಿಕೆಶಿ ಒತ್ತಾಯ

ಬೆಂಗಳೂರು, ಮಾ. 21: ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಜನ ಸಾಮಾನ್ಯರ ನೆರವಿಗೆ ನಿಲ್ಲುವ ದೃಷ್ಟಿಯಿಂದ ಕೂಡಲೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಶನಿವಾರ ಸದಾಶಿವನಗರದಲ್ಲಿನ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೂಡಲೇ ನಷ್ಟದ ಮೊತ್ತ ಅಂದಾಜು ಮಾಡಲು ವಿಶೇಷ ತಂಡವನ್ನು ರಚನೆ ಮಾಡಬೇಕು. ಬ್ಯಾಂಕುಗಳ ರೈತರ ಸಾಲ ಮರು ಪಾವತಿಗೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಸರಕಾರಗಳು ಬ್ಯಾಂಕುಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.
ಕುಕ್ಕಟೋದ್ಯಮ, ಹೈನುಗಾರಿಕೆ, ಬೀದಿ ವ್ಯಾಪಾರ, ದೊಡ್ಡ ಮಟ್ಟದ ವಹಿವಾಟಿಗೂ ಹೊಡೆತ ಬಿದ್ದಿದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಸರಕಾರ ಕ್ರಮ ವಹಿಸಬೇಕು. ಬ್ಯಾಂಕ್ ಬಡ್ಡಿ ಪಾವತಿಗೆ ಕಾಲಾವಕಾಶ ನೀಡಬೇಕು. ಆ ಮೂಲಕ ಜನರಿಗೆ ನೆರವಾಗಬೇಕು ಎಂದು ಶಿವಕುಮಾರ್ ಮನವಿ ಮಾಡಿದರು.
ರಾಜ್ಯದಲ್ಲಿ ಕೊರೋನ ಸೋಂಕು ಪೀಡಿತರ ಸಂಖ್ಯೆ ರಾಜ್ಯದಲ್ಲಿ 18ಕ್ಕೇರಿದ್ದು, ಸರಕಾರಿ ಆಸ್ಪತ್ರೆಗಳಿಂದ ಭವಿಷ್ಯದಲ್ಲಿ ಚಿಕಿತ್ಸೆ ಒದಗಿಸುವುದು ಕಷ್ಟ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಸಹಕಾರ ಪಡೆದುಕೊಳ್ಳಬೇಕೆಂದು ಶಿವಕುಮಾರ್ ಸಲಹೆ ಮಾಡಿದರು.







