ವಿದೇಶದಿಂದ ಬಂದವರಿಗೆ ಮತ್ತೋಮ್ಮೆ ಪರೀಕ್ಷೆ: ಶೋಭಾ ಕರಂದ್ಲಾಜೆ

ಉಡುಪಿ, ಎ.5: ಉಡುಪಿ ಜಿಲ್ಲೆಗೆ ವಿದೇಶಗಳಿಂದ ಆಗಮಿಸಿರುವ ವ್ಯಕ್ತಿಗಳ 14 ದಿನಗಳ ಕ್ವಾರಂಟೈನ್ ಅವಧಿ ಇಂದಿಗೆ ಮುಗಿದಿದ್ದು, ಇವರ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ. ಆದರೂ ಇನ್ನೊಂದು ಬಾರಿ ಅವರ ಮಾದರಿ ಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾ ಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಕುಂಜಿ ಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ರವಿವಾರ ಉಡುಪಿ ನಗರ ಸಭೆಯ ಎಲ್ಲಾ ವಾರ್ಡ್‌ಗಳಲ್ಲಿನ ಬಡ ಕುಟುಂಬಗಳಿಗೆ ಉಚಿತ ಆಹಾರದ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.
ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ಅರ್ಹ ಬಡ ಜನತೆಗೆ ಉಚಿತ ವಾಗಿ 95 ಕ್ವಿಂಟಾಲ್ ಅಕ್ಕಿಯನ್ನು ವಿತರಿಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಅಗತ್ಯತೆ ಕಂಡು ಬಂದಲ್ಲಿ ಪೂರೈಕೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಉಡುಪಿ ನಗರಸಭೆ ಸದಸ್ಯರ ಮೂಲಕ ಆಯಾ ವಾರ್ಡ್‌ಗಳಲ್ಲಿರುವ ಬಡ ಕುಟುಂಬಗಳಿಗೆ ತಲಾ 1000 ರೂ. ಮೌಲ್ಯದ ಒಟ್ಟು 1001 ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.
ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸಮಿತಿ ಅಧ್ಯಕ್ಷ ವಸಂತ ಭಟ್, ಸಂಚಾಲಕ ಮಟ್ಟಾರು ಗಣೇಶ್ ಕಿಣಿ, ಕಾರ್ಯದರ್ಶಿ ರಾಘವೇಂದ್ರ ಕಿಣಿ ಮೊದಲಾದವರು ಉಪಸ್ಥಿತರಿದ್ದರು







