ಸಚಿವರ ನಡುವೆ ಯಾವುದೇ ಭಿನ್ನಭಿಪ್ರಾಯವಿಲ್ಲ: ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು, ಎ.5: ಕೊರೋನ ಸೋಂಕಿನ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಸರಕಾರದ ಸಚಿವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆಧಾರ ರಹಿತ ಆರೋಪಕ್ಕೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸರಕಾರದ ಎಲ್ಲ ಸಚಿವರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲವೆಂದು ತಿಳಿಸಿದರು.
ರಾಜ್ಯಾದ್ಯಂತ ಕೋವಿಡ್-19 ಆಸ್ಪತ್ರೆ ಆರಂಭಿಸುವ ನಿರ್ಧಾರಕ್ಕೆ ಬದ್ಧವಾಗಿದ್ದು, ಶೀಘ್ರದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಕೊರೋನ ಆಸ್ಪತ್ರೆ ಪ್ರಾರಂಭಿಸಲಾಗುವುದು. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ನಿವೃತ್ತ ವೈದ್ಯರನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.
ಹೋಮ್ ಕ್ವಾರಂಟೈನ್‍ನಲ್ಲಿರುವವರು ನಿಯಮ ಉಲ್ಲಂಘಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ರಾಜ್ಯದ ವಿವಿಧ ನಗರಕ್ಕೆ ಗುಳೆ ಹೋಗಿ ಅಲ್ಲಿಯೇ ಸಿಲುಕಿರುವವರನ್ನು ಅವರ ಊರುಗಳಿಗೆ ಕರೆತರುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದರು.
ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಬಂದ್ ಮಾಡುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡುವಂತೆ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
-ಶ್ರೀರಾಮುಲು, ಆರೋಗ್ಯ ಸಚಿವ







