ಉಡುಪಿ: ಕೋವಿಡ್-19 ಮುಂಜಾಗ್ರತೆ, ಪರಿಶೀಲನಾ ಸಭೆ

ಉಡುಪಿ, ಎ.10: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಕೊರೋನ ವೈರಸ್ (ಕೋವಿಡ್-19) ಕುರಿತು ಮುಂಜಾಗ್ರತಾ ಕ್ರಮ ಹಾಗೂ ಪರಿಶೀಲನಾ ಸಭೆ ಇಂದು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಕೋವಿಡ್ 19 ನೋಡೆಲ್ ಅಧಿಕಾರಿಯಾಗಿರುವ ಡಾ.ಪ್ರಶಾಂತ್ ಭಟ್ ಅವರು ಕೋವಿಡ್-19 ಸೋಂಕು ತಡೆಗೆ ಉಡುಪಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ತಮ್ಮ ಕ್ಷೇತ್ರಗಳ ಮಟ್ಟದಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಕಾರ್ಯಪಡೆಯ ಅಧಿಕಾರಿಗಳಿಂದ ಹಾಗೂ ಸಂಬಂಧ ಪಟ್ಟ ನೋಡೆಲ್ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದು ಕೊಂಡರು. ಅಲ್ಲದೇ ಮುಂಬರುವ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮಗಳ ಮೂಲಕ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ಲಾಲಾಜಿ ಮೆಂಡನ್, ಸುನಿಲ್ ಕುಮಾರ್, ಬಿ.ಎಂ.ಸುಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ಪಿ ವಿಷ್ಣುವರ್ಧನ್, ಸಿಇಓ ಪ್ರೀತಿ ಗೆಹ್ಲೋಟ್, ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಳ ಕಚೇರಿಯಲ್ಲಿ, ಡಿಎಚ್‌ಓ ಅವರ ಅಧ್ಯಕ್ಷತೆಯಲ್ಲಿ ಎಲ್ಲಾ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಹಾಗೂ ಅಧೀನ ಸಂಸ್ಥೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ಶುಕ್ರವಾರ ಸಹ ಜಿಲ್ಲಾ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತೆಯರು ಕಾರ್ಕಳ ತಾಲೂಕಿನ ದುರ್ಗಾ, ಬೆಳ್ಮಣ್, ಉಡುಪಿ ತಾಲೂಕಿನ ಪೆರ್ಣಂಕಿಲ, ಸಾಸ್ತಾನ, ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ, ಗಂಗೊಳ್ಳಿ, ಕುಂಭಾಶಿ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಕೋವಿಡ್-19 ಕುರಿತು ಜಾಗೃತಿ ಕರಪತ್ರಗಳನ್ನು ಹಂಚಿಸಿದರು. ಹೋಮ್ ಕ್ವಾರಂಟೈನ್‌ನಲ್ಲಿರುವವರ ಆರೆಗ್ಯವನ್ನೂ ಅವರು ವಿಚಾರಿಸಿದರು.








