ದ.ಕ. ಜಿಲ್ಲೆಯಲ್ಲಿ ಸೀಲ್ ಡೌನ್ ಮಾಡುವ ಉದ್ದೇಶ ಇಲ್ಲ: ಸಂಸದ ನಳಿನ್ ಕುಮಾರ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೀಲ್ ಡೌನ್ ಮಾಡುವ ಉದ್ದೇಶ ಇಲ್ಲ, ಜಿಲ್ಲೆಯ ಜನತೆ ಸಹಕಾರ ನೀಡಿದರೆ ಮುಂದಿನ ದಿನಗಳಲ್ಲಿ ಜಿಲ್ಲೆ ಸಂಪೂರ್ಣ ಕೋವಿಡ್ -19 ರೋಗ ಮುಕ್ತವಾಗಲಿದೆ ಎಂದು ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ ಏಳು ದಿನಗಳಲ್ಲಿ ಜಿಲ್ಲೆಯಲ್ಲಿ ಯಾವೂದೇ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ.10 ತಿಂಗಳ ಕೊರೋನ ಸೋಂಕು ಪೀಡಿತ ಮಗು ಕೂಡಾ ಗುಣಮುಖವಾಗಿದೆ. ಜಿಲ್ಲೆಯಲ್ಲಿ ಕೊರೋನ ವೈರಸ್ ಸೋಂಕು ಸಂಪೂರ್ಣ ಹತೋಟಿಯಲ್ಲಿದೆ. ಜಿಲ್ಲೆಯ ಅಧಿಕಾರಿಗಳು, ಸಾರ್ವಜನಿಕರ ಸಹಕಾರದಿಂದ ಇದು ಸಾಧ್ಯವಾಗಿದೆ. ಕಾಸರಗೊಡು -ಮಂಗಳೂರು ನಡುವಿನ ಗಡಿ ಬಂದ್ ಆಗಿರುವುದರಿಂದ ಜಿಲ್ಲೆಯಲ್ಲಿ ಕೊರೋನ ಸೋಂಕು ಹೆಚ್ಚು ಹರಡುವುದನ್ನು ತಡೆಯಲು ಸಾಧ್ಯವಾಗಿದೆ. ಜಿಲ್ಲೆಯಲ್ಲಿ ಕೊರೋನ ಸೋಂಕು ತಡೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಮೇಲೆ ತಡೆ ಒಡ್ಡುವವರ ವಿರುದ್ಧ ಸೂಕ್ತ ಕ್ರಮವನ್ನು ಅಧಿಕಾರಿಗಳು ಕೈಗೊಳ್ಳಲಿದ್ದಾರೆ. ಜಿಲ್ಲೆಯನ್ನು ಕೊರೋನ ಸೋಂಕು ಮುಕ್ತ ಮಾಡಲು ಎಲ್ಲರ ಸಹಕಾರ ಅಗತ್ಯ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.





