ರವಿಚನ್ನಣ್ಣನವರ್ ವಿರುದ್ಧ ಯಾವುದೇ ದೂರು ನೀಡಿಲ್ಲ: ಡಿಸಿಎಂ ಸವದಿ ಸ್ಪಷ್ಟನೆ

ಬೆಂಗಳೂರು, ಎ.12: ಹಿರಿಯ ಪೊಲೀಸ್ ಅಧಿಕಾರಿ ರವಿಚನ್ನಣ್ಣನವರ್ ವಿರುದ್ಧ ಮುಖ್ಯಮಂತ್ರಿಗೆ ದೂರು ನೀಡಿದ್ದೇನೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ, ಅದು ಸತ್ಯಕ್ಕೆ ದೂರವಾದ ಸಂಗತಿಯಾಗಿದ್ದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿಗೆ ಅತ್ತಿಬೆಲೆ ಚೆಕ್‍ಪೋಸ್ಟ್ ಬಳಿ ನಡೆದ ಘಟನೆಯಿಂದಾಗಿ ನಾನು ಅಸಮಾಧಾನಗೊಂಡಿದ್ದು, ಈ ಕುರಿತು ಮುಖ್ಯಮಂತ್ರಿಗೆ ದೂರು ನೀಡಿದ್ದೇನೆ ಎಂದು ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತಾಗಿದ್ದು, ನಾನು ಯಾರಿಗೂ ದೂರು ನೀಡಿಲ್ಲ ಎಂದು ಅವರು ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿ ರವಿಚನ್ನಣ್ಣನವರ್ ಅವರೊಬ್ಬ ಒಳ್ಳೆಯ ಅಧಿಕಾರಿ. ಅದರಲ್ಲಿ ಎರಡು ಮಾತಿಲ್ಲ. ಅವರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ ವಿನಃ, ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದು ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಯಾವುದೇ ಸಂಘಟನೆಗಳು ನನ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ವಿನಾಕಾರಣ ನಾನು ಅವರ ವಿರುದ್ಧ ಮುಖ್ಯಮಂತ್ರಿಗೆ ದೂರು ನೀಡುವಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಹೀಗಾಗಿ, ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗಬಾರದು ಎಂಬ ಹಿನ್ನೆಲೆಯಲ್ಲಿ ನಾನಿಂದು ಸ್ಪಷ್ಟೀಕರಣ ನೀಡಲು ಬಯಸಿದ್ದೇನೆ ಎಂದು ಅವರು ಪ್ರಕಟನೆಯಲ್ಲಿ ಹೇಳಿದ್ದಾರೆ.







