ಕೊರೋನ ಸೋಂಕಿತರ ಸಂಪರ್ಕದಲ್ಲಿದ್ದವರ ಪತ್ತೆಗೆ ವಿಶೇಷ ತಂಡ ರಚನೆ: ಬಿಬಿಎಂಪಿ ಆಯುಕ್ತ

ಬೆಂಗಳೂರು, ಎ.13: ಕೊರೋನ ವೈರಸ್ ಸೋಂಕಿತರು ಹಾಗೂ ಅವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆಹಚ್ಚಲು ತರಬೇತಿ ಪಡೆದ ವಿಶೇಷ ತಂಡ ರಚನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸದ್ಯ ಕೊರೋನ ಪೀಡಿತರ ಸಂಖ್ಯೆ ಕಡಿಮೆಯಿದೆ. ಹೀಗಾಗಿ ಪ್ರಾಥಮಿಕ ಸೋಂಕಿತರು ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದ ವ್ಯಕ್ತಿಗಳನ್ನು ಪತ್ತೆಹಚ್ಚುವುದು, ಅಂತಹವರಿಗೆ ಸ್ಟಾಂಪಿಂಗ್ ಮಾಡುವುದನ್ನು ಒಂದೇ ತಂಡ ನಿರ್ವಹಿಸುತ್ತಿದೆ ಎಂದರು.
ಕೊರೋನ ಪೀಡಿತರ ಸಂಖ್ಯೆ ಹೆಚ್ಚಾದರೆ ಅವರನ್ನು ಪತ್ತೆಹಚ್ಚಲು ಒಂದೇ ತಂಡದಿಂದ ಸಾಧ್ಯವಿಲ್ಲ. ಹೀಗಾಗಿ ತರಬೇತಿ ಪಡೆದ ವಿಶೇಷ ತಂಡಗಳನ್ನು ರಚಿಸುವ ಕುರಿತಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಎಂದು ಹೇಳಿದರು.
ಪ್ರಾಥಮಿಕ ಕೊರೋನ ವೈರಸ್ ಸೋಂಕಿತರನ್ನು 12 ಗಂಟೆಯೊಳಗಾಗಿ ಪತ್ತೆಹಚ್ಚಬೇಕು. ಅದೇ ರೀತಿ ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿರುವ ವ್ಯಕ್ತಿಗಳನ್ನು 24 ಗಂಟೆಯೊಳಗೆ ಪತ್ತೆಹಚ್ಚಿ ಅವರನ್ನು ಕ್ವಾರಂಟೈನ್ ಸೆಂಟರ್ ಗಳಿಗೆ ಸೇರಿಸಲು ಅನುಕೂಲವಾಗುವಂತೆ ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ಹೇಳಿದರು.
ಸಿಸಿ ಕ್ಯಾಮೆರಾ ಅಳವಡಿಕೆ: ಸೀಲ್‍ಡೌನ್ ವಿಧಿಸಿರುವ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ಅನಾವಶ್ಯಕವಾಗಿ ಓಡಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ರಸ್ತೆಯಲ್ಲಿ ಬೇಕಾಬಿಟ್ಟಿ ಓಡಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಎ.30ರ ವರೆಗೂ ಲಾಕ್‍ಡೌನ್ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಅನುಸರಿಸುವ ಕುರಿತಂತೆ ರಾಜ್ಯ ಟಾಸ್ಕ್ ಫೋರ್ಸ್ ನಿರ್ಧಾರ ಕೈಗೊಳ್ಳಲಿದ್ದು, ಅವರ ನಿರ್ಧಾರದಂತೆ ನಗರದಲ್ಲೂ ಮಾರ್ಗಸೂಚಿ ರಚನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.







