ರೈತರು ನೇರವಾಗಿ ಗ್ರಾಹಕರ ಬಳಿಗೆ ಹೋಗಬೇಕು: ಸಚಿವ ಬಿ.ಸಿ.ಪಾಟೀಲ್

ಕೊಪ್ಪಳ, ಎ. 18: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ತಡೆಗಟ್ಟುವ ದೃಷ್ಟಿಯಿಂದ ಹೇರಿರುವ ಲಾಕ್‍ಡೌನ್ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಸಂಪರ್ಕಕ್ಕೆ ಹೋದರೆ ಕೃಷಿ ಉತ್ಪನ್ನಗಳನ್ನು ಅಗ್ಗದ ಬೆಲೆಗೆ ಕೇಳುವ ಸಾಧ್ಯತೆಗಳಿವೆ. ಹೀಗಾಗಿ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರ ಬಳಿಗೆ ಕೊಂಡೊಯ್ಯಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ಶನಿವಾರ ಜಿಲ್ಲೆಯಲ್ಲಿ ಕೃಷಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯ ಸರಕಾರ ದಲ್ಲಾಳಿಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಂಡಿದೆ. ಲಾಕ್ ಡೌನ್ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಜತೆಗೆ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅವಕಾಶ ಆಗುವಂತೆ ಗ್ರೀನ್ ಪಾಸ್ ವಿತರಣೆ ಮಾಡಲಾಗಿದೆ ಎಂದು ಹೇಳಿದರು.
ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಆನ್‍ಲೈನ್ ಟ್ರೇಡಿಂಗ್ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಭಯ ನೀಡಿದ ಅವರು, ರಾಜ್ಯದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಅಗತ್ಯದಷ್ಟು ದಾಸ್ತಾನು ಮಾಡಲಾಗಿದೆ ಎಂದರು.
ಹದಿನೈದು ದಿನಗಳಿಂದ ರಾಜ್ಯದ ಎಲ್ಲ ಜಿಲ್ಲೆಗಳನ್ನು ಭೇಟಿ ಮಾಡಿದ್ದು, ಲಾಕ್‍ಡೌನ್ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿದ್ದು, ಅವುಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದೇನೆ. ಸರಕಾರ ನೀಡಿದ ಜವಾಬ್ದಾರಿಯನ್ನು ಪಾಲಿಸುತ್ತಿದ್ದೇನೆ ಎಂದು ಅವರು ಹೇಳಿದರು.
ತಾನು ಕೃಷಿ ಸಚಿವನಾಗಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದು, ರೈತರ ಕೆಲಸ ಮಾಡುತ್ತಿರುವುದು ಹೆಮ್ಮೆ ಮತ್ತು ಆತ್ಮತೃಪ್ತಿ ನೀಡಿದೆ. ಇದೇ ವೇಳೆ ತನಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನು ವಹಿಸಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಶ್ರಮಿಸುತ್ತೇವೆ ಎಂದು ಪಾಟೀಲ್ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಹಾಲಪ್ಪ ಆಚಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ, ಮುಖಂಡರಾದ ಅಂಬರೀಶ್ ಕುಳಗಿ, ಅಮರೇಶ್ ಕರಡಿ ಸೇರಿದಂತೆ ಇನ್ನಿತರರು ಹಾಜರಿದ್ದರು.







