ಸಮಸ್ಯೆ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ
ಕೌಟುಂಬಿಕ ದೌರ್ಜನ್ಯ ಪ್ರಕರಣ

ಬೆಂಗಳೂರು, ಎ.23: ಲಾಕ್‍ಡೌನ್ ಅವಧಿಯಲ್ಲಿ ಹೆಚ್ಚಾಗುತ್ತಿರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಕುರಿತು ಪ್ರಸ್ತಾಪಿಸಿರುವ ಹೈಕೋರ್ಟ್, ಈ ಸಮಸ್ಯೆ ನಿಯಂತ್ರಿಸಲು ಹಾಗೂ ಪರಿಹರಿಸಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ಕೊರೋನ ಸೋಂಕು ಹರಡುವುದನ್ನು ತಡೆಗಟ್ಟಲು ಲಾಕ್‍ಡೌನ್ ಜಾರಿಗೊಳಿಸಿದ ಬಳಿಕ ಕೌಟುಂಬಿಕ ಕಲಹ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಮಾಧ್ಯಮಗಳಲ್ಲಿ ನಿರಂತರ ವರದಿಗಳು ಬರುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ಕೌಟುಂಬಿಕ ದೌರ್ಜನ್ಯ ಮಿತಿ ಮೀರಿರುವ ಕುರಿತು ಬೆಳಕು ಚೆಲ್ಲಲಾಗಿದೆ. ಈ ಸಮಸ್ಯೆ ನಿಯಂತ್ರಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ತಿಳಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚಿಸಿದೆ.
ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರು, ಮಕ್ಕಳು ಹಾಗೂ ಪುರುಷರು ತಮ್ಮ ದೂರು ನೀಡಲು ರಾಜ್ಯದಲ್ಲಿ ಯಾವೆಲ್ಲಾ ಸಹಾಯವಾಣಿಗಳು ಲಭ್ಯ ಇವೆ. ಬಂದಂತಹ ದೂರುಗಳನ್ನು ಹೇಗೆ ಪರಿಹರಿಸಲಾಗುತ್ತಿದೆ. ಆರೋಪಿತರ ವಿರುದ್ಧ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಕುರಿತು ನಿಖರ ಮಾಹಿತಿ ನೀಡುವಂತೆ ಸರಕಾರಕ್ಕೆ ನಿರ್ದೇಶಿಸಿದೆ.
ಅಲ್ಲದೆ, ಕೋವಿಡ್-19 ಪರಿಣಾಮವಾಗಿ ಲಾಕ್‍ಡೌನ್ ಜಾರಿಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿರುವ ವ್ಯಕ್ತಿಗಳಿಗೆ ಅಗತ್ಯ ನೆರವು ನೀಡಲು ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆಯೂ ವಿವರಣೆ ನೀಡುವಂತೆ ಸೂಚಿಸಿರುವ ಪೀಠ, ವಿಚಾರಣೆಯನ್ನು ಮುಂದೂಡಿದೆ.







