'ಉಡುಪಿ ಜಿಲ್ಲೆಯಲ್ಲಿ ಸದ್ಯ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಇಲ್ಲ'
ಉಡುಪಿ, ಮೇ 10: ಕೋವಿಡ್- 19ಗೆ ಸಂಬಂಧಿಸಿ ಹಸಿರು ವಲಯವಾಗಿ ರುವ ಉಡುಪಿ ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೊರೋನ ಪಾಸಿಟಿವ್ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಮತ್ತು ಹೊರರಾಜ್ಯದಿಂದ ಸಾಕಷ್ಟು ಮಂದಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಜಿಲ್ಲೆಯೊಳಗೆ ಕೆಎಸ್ ಆರ್‌ಟಿಸಿಬಸ್ ಸಂಚಾರ ಆರಂಭವಾಗುವುದಿಲ್ಲ ಎಂದು ತಿಳಿದು ಬಂದಿದೆ.
ಉಡುಪಿ ಹಸಿರು ವಲಯವಾಗಿರುವುದರಿಂದ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ರೂಟ್ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿ ಇತ್ತೀಚೆಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಗತ್ಯ ಇರುವ ಕಡೆ ಗಳಿಗೆ ಮತ್ತು ಹೆಚ್ಚು ಜನ ಸಂಚಾರ ಇರುವ ಮಾರ್ಗಗಳಲ್ಲಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು.
ಈ ಮಧ್ಯೆ ಖಾಸಗಿ ಬಸ್ ಮಾಲಕರು ಸರಕಾರ ವಿಧಿಸಿರುವ ಷರತ್ತುಗಳಿಗೆ ಒಪ್ಪದೆ ಲಾಕ್‌ಡೌನ್ ಮುಗಿಯುವವರೆಗೆ ಬಸ್ ಓಡಾಟ ಆರಂಭಿಸದೆ ಇರಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 11ರಿಂದ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈ ಬಗ್ಗೆ ಜಿಲ್ಲಾಡಳಿತ ಈವರೆಗೆ ಯಾವುದೇ ನಿರ್ಧಾರ ತೆಗೆದು ಕೊಂಡಿಲ್ಲ. ಆದುದರಿಂದ ಸದ್ಯ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವ ಸಾಧ್ಯತೆ ಕಡಿಮೆಯಾಗಿದೆ.
‘ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಆದುದರಿಂದ ಸದ್ಯಕ್ಕೆ ಜಿಲ್ಲೆಯಲ್ಲಿ ಬಸ್ ಸಂಚಾರ ಇರುವುದಿಲ್ಲ’
-ಜಿ.ಜಗದೀಶ್, ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ







