ಮೇ 19ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಮೇ 17: ಕೊರೋನ ವೈರಸ್ ಸೋಂಕು ತಡೆಗಟ್ಟಲು ಹೇರಿರುವ ಲಾಕ್‍ಡೌನ್‍ನಿಂದ ಉಂಟಾಗಿರುವ ಪರಿಸ್ಥಿತಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಪ್ಯಾಕೇಜ್‍ಗಳು, ಎಪಿಎಂಸಿ ಕಾಯ್ದೆ ತಿದ್ದುಪಡಿ, ಗ್ರಾಮ ಪಂಚಾಯತ್ ಚುನಾವಣೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಿ, ಹೋರಾಟ ಕೈಗೆತ್ತಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಮೇ 19ಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮೇ 19ರ ಮಂಗಳವಾರ ಸಂಜೆ 4ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆಯನ್ನು ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಹಿಸಲಿದ್ದು, ಮಾತೃಶ್ರೀ, ಸಾಂತ್ವನ ಸೇರಿದಂತೆ ಇನ್ನಿತರ ಯೋಜನೆಗಳನ್ನು ರದ್ದುಗೊಳಿಸಿರುವ ರಾಜ್ಯ ಸರಕಾರದ ವಿರುದ್ಧ ಮುಂದೇನು ಮಾಡಬೇಕೆಂದು ಸಭೆಯಲ್ಲಿ ಚರ್ಚಿಸಲಿದ್ದಾರೆ.
ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಗೆ ತೆರಳುವ ವಲಸೆ ಕಾರ್ಮಿಕರಿಗೆ ರಾಜ್ಯ ಸರಕಾರ ಸೂಕ್ತ ರೈಲ್ವೆ ಹಾಗೂ ಬಸ್ ವ್ಯವಸ್ಥೆ ಕಲ್ಪಿಸದಿರುವುದು ಹಾಗೂ ಅವರಿಗೆ ಊಟ-ವಸತಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಒದಗಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಈ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ಪಕ್ಷದಿಂದ ಮುಂದೇನು ಮಾಡಬಹುದು ಎಂದು ಚರ್ಚಿಸುವ ಸಾಧ್ಯತೆಗಳಿವೆ.
ಈ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರು, ಮೇಲ್ಮನೆ ಸದಸ್ಯರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಕೊರೋನ ಸೋಂಕು ನಿಯಂತ್ರಣ, ಸರಕಾರಗಳ ಪ್ಯಾಕೇಜ್ ಘೋಷಣೆ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ವೈಫಲ್ಯಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಲಿದ್ದು, ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಿದ್ದಾರೆಂದು ಗೊತ್ತಾಗಿದೆ.