ಆಗ ರೈತರನ್ನು ಗುಂಡಿಕ್ಕಿ ಕೊಂದರು, ಈಗ ಅವರಿಂದ ಭೂಮಿ ಕಿತ್ತುಕೊಂಡು ಸಾಯಿಸಲು ಹೊರಟಿದ್ದಾರೆ: ಸಿದ್ದರಾಮಯ್ಯ ಆಕ್ರೋಶ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಜಿ ಸಿಎಂ ವಿರೋಧ

ಬೆಂಗಳೂರು, ಜೂ.13: ‘‘ಹಸಿರು ಶಾಲು ಹೊದ್ದುಕೊಂಡು ತಾನೊಬ್ಬ ರೈತ ನಾಯಕ ಎಂದು ಹೇಳುತ್ತಲೇ ಅಧಿಕಾರಕ್ಕೆ ಬಂದಿರುವ ಬಿ.ಎಸ್.ಯಡಿಯೂರಪ್ಪ ಅವರ ಮುಖವಾಡ ಕಳಚಿ ಬಿದ್ದಿದೆ. ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ರೈತರನ್ನು ಗುಂಡಿಕ್ಕಿ ಕೊಂದರು, ಈಗ ಅವರಿಂದ ಭೂಮಿ ಕಿತ್ತುಕೊಂಡು ಸಾಯಿಸಲು ಹೊರಟಿದ್ದಾರೆ’’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ, 80 ಹಾಗೂ 63 ಸೆಕ್ಷನ್‌ಗಳನ್ನು ರದ್ದುಗೊಳಿಸಲು ಮುಂದಾಗಿರುವ ರಾಜ್ಯ ಸರಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.
ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಇನ್ನಷ್ಟು ಬಲಪಡಿಸಿ ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು. ಯಡಿಯೂರಪ್ಪ ಸರ್ಕಾರ ಉಳುವವನನ್ನು ಒಕ್ಕಲೆಬ್ಬಿಸಲು ಹೊರಟಿದೆ ಎಂದು ಕಿಡಿಕಾರಿರುವ ಸಿದ್ದರಾಮಯ್ಯ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಳಿಸುವ ತಿದ್ದುಪಡಿ, ಪ್ರಮುಖ ಬೆಳೆಗಳನ್ನು ಅಗತ್ಯ ವಸ್ತುಗಳ ಕಾಯ್ದೆಯಿಂದ ಹೊರಗಿಡುವ ತಿದ್ದುಪಡಿ, ಬೀಜ-ಗೊಬ್ಬರಗಳ ಮೇಲೆ ಜಿಎಸ್ ಟಿ.. ಹೀಗೆ ರೈತರ ಮೇಲೆ ಪ್ರಹಾರ ಮಾಡುತ್ತಾ ಬಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗ ರೈತರಿಂದ ಭೂಮಿಯನ್ನೇ ಕಿತ್ತುಕೊಳ್ಳಲು ಹೊರಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ರೈತರ ಹಿತದೃಷ್ಟಿಯ ಲವಲೇಶವೂ ಇಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ನಮ್ಮ ಪಕ್ಷ ಸದನದ ಒಳಗೆ ಮತ್ತು ಹೊರಗೆ ಬಲವಾಗಿ ವಿರೋಧಿಸಲಿದೆ. ಈ ಬಗ್ಗೆ ನಮ್ಮ ಕಾರ್ಯಕರ್ತರು ರೈತರಿಗೆ ತಿಳುವಳಿಕೆ ನೀಡಿ ಗ್ರಾಮೀಣ ಮಟ್ಟದಿಂದಲೇ ಹೋರಾಟವನ್ನು ರೂಪಿಸಲು ನಿರ್ಧರಿಸಿದ್ದೇವೆ. ಬಿಜೆಪಿಯ ರೈತವಿರೋಧಿ ನೀತಿಯನ್ನು ಮನೆಮನೆಗೂ ಮುಟ್ಟಿಸುವ ಕೆಲಸವನ್ನು ನಾವು ಮಾಡಲಿದ್ದೇವೆ ಎಂದವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಹಸಿರು ಶಾಲು ಹೊದ್ದುಕೊಂಡು ತಾನೊಬ್ಬ ರೈತ ನಾಯಕ ಎಂದು ಹೇಳುತ್ತಲೇ ಅಧಿಕಾರಕ್ಕೆ ಬಂದಿರುವ @BSYBJP ಅವರ ಮುಖವಾಡ ಕಳಚಿ ಬಿದ್ದಿದೆ. ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ರೈತರನ್ನು ಗುಂಡಿಕ್ಕಿ ಕೊಂದರು, ಈಗ ಅವರಿಂದ ಭೂಮಿ ಕಿತ್ತುಕೊಂಡು ಸಾಯಿಸಲು ಹೊರಟಿದ್ದಾರೆ. 6/7#ರೈತವಿರೋಧಿಬಿಜೆಪಿ
— Siddaramaiah (@siddaramaiah) June 12, 2020







