ಮುಂದಿನ ಎರಡು ದಿನ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ಜೂ.15: ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗದಲ್ಲಿ ಭಾರೀ ಮಳೆಯಾಗಲಿದೆ.
ಕರಾವಳಿಯಲ್ಲಿ ಭಾರೀ ಮಳೆಯಾದರೆ, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದರೆ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣೆಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ತುಂತರು ಮಳೆಯಾಗಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡದ ಮಾಣಿ, ಪುತ್ತೂರು, ಪಣಂಬೂರು, ಮೂಡಬಿದ್ರೆ, ಉತ್ತರ ಕನ್ನಡ ಜಿಲ್ಲೆಯ ಶಿರಾಳಿ, ಗೋಕರ್ಣ, ಮಂಚಿಕೇರಿ, ಉಡುಪಿ ಜಿಲ್ಲೆಯ ಕಾರ್ಕಳ, ಕೊಲ್ಲೂರು, ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ, ಹೊಸನಗರ, ತಾಳಗುಪ್ಪ, ಕೊಡಗು ಜಿಲ್ಲೆಯ ಭಾಗಮಂಡಲಗಳಲ್ಲಿ ಭಾರೀ ಮಳೆಯಾಗಿದೆ. ಉಳಿದಂತೆ ಚಿಕ್ಕಮಗಳೂರು, ಮೈಸೂರು, ಹಾವೇರಿ, ಹಾಸನ, ಕಲಬುರಗಿ ಜಿಲ್ಲೆಗಳ ಕೆಲವು ಭಾಗದಲ್ಲಿ ಸಾಧಾರಣೆ ಮಳೆಯಾದ ಬಗ್ಗೆ ವರದಿಯಾಗಿದೆ.





