ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸಾಧ್ಯತೆ

ಬೆಂಗಳೂರು, ಜೂ. 15: ಕೆಪಿಸಿಸಿಯ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಜುಲೈ 2ರ ಗುರುವಾರ ನಡೆಯಲಿದ್ದು, ನಾಳೆ(ಜೂ.16) ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ.
ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಮೂರು ಬಾರಿ ಮುಂದೂಡಲ್ಪಟ್ಟಿತ್ತು. ಆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಕೊರೋನ ಸೋಂಕು ತಡೆಗಟ್ಟಲು ಹೇರಿರುವ ಲಾಕ್‍ಡೌನ್ ಮಾರ್ಗಸೂಚಿ ಜಾರಿಯಲ್ಲಿರುವ ಕಾರಣ ಪದಗ್ರಹಣ ಸಮಾರಂಭಕ್ಕೆ ಸರಕಾರ ಅನುಮತಿ ನೀಡಿರಲಿಲ್ಲ. ಇದೀಗ ಮಾರ್ಗಸೂಚಿಯನ್ವಯ ಸಮಾರಂಭ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಷರತ್ತುಬದ್ಧ ಅನುಮತಿ ನೀಡಿದ್ದು, ಜುಲೈ 2ಕ್ಕೆ ಶಿವಕುಮಾರ್ ಪದಗ್ರಹಣ ಸ್ವೀಕಾರ ಸಮಾರಂಭ ನಡೆಯುವುದು ಬಹುತೇಕ ಖಚಿತವಾಗಿದೆ.
ಕೆಪಿಸಿಸಿ ನೂತನ ಕಚೇರಿಯಲ್ಲಿ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ನಡೆಯಲಿದ್ದು, 150 ಮಂದಿ ಆಯ್ದ ಕಾಂಗ್ರೆಸ್ ಮುಖಂಡರ ಉಪಸ್ಥಿತಿಯಲ್ಲಿ ಸಮಾರಂಭ ಜರುಗಲಿದೆ.
ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ನಿಯೋಜಿತ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಅಧಿಕೃತವಾಗಿ ಪಕ್ಷದ ಅಧ್ಯಕ್ಷರಾಗಿ ಕಾರ್ಯಾರಂಭ ಮಾಡಲಿದ್ದಾರೆ. ಇದೇ ವೇಳೆ ಸಂವಿಧಾನದ ಪೀಠಿಕೆಯನ್ನು ಓದಿ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯುವ ವೇಳೆಯೇ ಏಕಕಾಲಕ್ಕೆ ರಾಜ್ಯದ ಎಲ್ಲ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಹಾಗೂ ಸಂವಿಧಾದ ಪೀಠಿಕೆ ಓದುವ ಕಾರ್ಯ ನಡೆಯಲಿದೆ. ಸಮಾರಂಭದ ವರ್ಚ್ಯುಯಲ್ ಲೈವ್ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಈ ಸಮಾರಂಭ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮಾರಕ ಕೊರೋನ ಸೋಂಕಿನ ಮಾರ್ಗಸೂಚಿ ನೆಪದಲ್ಲಿ ರಾಜ್ಯ ಸರಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಅವಕಾಶ ನಿರಾಕರಿಸಿತ್ತು. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಸಮಾರಂಭಕ್ಕೆ ಅನುಮತಿ ನೀಡಿದ್ದು, ಪದಗ್ರಹಣ ಕಾರ್ಯಕ್ರಮದ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ. ನಾಳೆ(ಜೂ.16) ಈ ಬಗ್ಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ'
-ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ







