ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ: ನಿರ್ಧಾರ ಪುನರ್ ಪರಿಶೀಲಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಜೂ.17: ಕೊರೋನ ವೈರಸ್ ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಕೇಂದ್ರ ಸರಕಾರ ಲಾಕ್‍ಡೌನ್ ಸಡಿಲಿಕೆಗೆ ಸಂಬಂಧಿಸಿದಂತೆ ಮೇ 30ರಂದು ಕೆಲ ನಿರ್ಧಾರಗಳನ್ನು ಕೈಗೊಂಡಿತು. ರಾಜ್ಯ ಸರಕಾರ ಕೂಡ ಜೂನ್ 8ರಿಂದ ಮಸೀದಿ, ಚರ್ಚ್, ದೇಗುಲ ತೆರೆಯಲು ಅನುಮತಿ ನೀಡಿತು. ಅದೇ ರೀತಿಯಾಗಿ ರಾಜ್ಯ ಚುನಾವಣಾ ಆಯೋಗ ಕೂಡ ಗ್ರಾಪಂ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲಿಸುವ ನಿರ್ಧಾರದ ಬಗ್ಗೆ ಜುಲೈ 1 ರಂದು ತಿಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ವಾದಿಸಿದ ಮಾಜಿ ಅಡ್ವೊಕೇಟ್ ಜನರಲ್, ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮಕುಮಾರ್ ಅವರು, ಕೇಂದ್ರ ಸರಕಾರ ಲಾಕ್‍ಡೌನ್ ಅನ್ನು ವಿಸ್ತರಣೆಗೊಳಿಸುವ ಮೂರು ದಿನಗಳ ಮೊದಲು ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮುಂದೂಡಿತು.







