ಮೈಸೂರು: ಖಾಸಗಿ ಕಂಪನಿಯೊಂದರ ಉದ್ಯೋಗಿ ಮೇಲೆ ಹಲ್ಲೆ; ಸಾವು
ಮೈಸೂರು,ಜೂ.17: ಖಾಸಗಿ ಕಂಪನಿಯೊಂದರ ಉದ್ಯೋಗಿಯೋರ್ವರ ಮೇಲೆ ನಾಲ್ವರು ದುಷ್ಕರ್ಮಿಗಳು ಇಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಆರ್ಥಿಕ್ ದೇವರಾಜ್ ಎಂಬವರೇ ಹಲ್ಲೆಗೊಳಗಾದವರಾಗಿದ್ದರು. ಇವರು ಹೆಬ್ಬಾಳು ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಆರ್ಥಿಕ್ ಅವರನ್ನು ಕೆಲಸದಿಂದ ತೆಗೆಯಲಾಗಿತ್ತು ಎನ್ನಲಾಗಿದೆ.
ಇಂದು ವಿಜಯ ನಗರ ನಾಲ್ಕನೇ ಹಂತದಲ್ಲಿ ಆರ್ಥಿಕ್ ಬರುತ್ತಿದ್ದಾಗ ಬುಲೆಟ್ ನಲ್ಲಿ ಬಂದ ದುಷ್ಕರ್ಮಿಗಳು ಗಂಭೀರವಾಗಿ ಹಲ್ಲೆ ನಡೆಸಿದ್ದರು. ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಆರ್ಥಿಕ್ ನನ್ನು ನೋಡಿದ ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ವಿಜಯನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಬಾಲಕೃಷ್ಣ, ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಆಗಮಿಸಿ ಆರ್ಥಿಕ್ ನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಿಸದೇ ಆರ್ಥಿಕ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







