ಈ ಬಾರಿ ಶೇಕಡ 90ರಷ್ಟು ಎಸೆಸೆಲ್ಸಿ ವಿದ್ಯಾರ್ಥಿಗಳು ಫೇಲ್ ಆಗುತ್ತಾರೆ ಎಂದ ವಾಟಾಳ್ ನಾಗರಾಜ್ !

ಮೈಸೂರು, ಜೂ.28: ಈ ಬಾರಿ ಶೇಕಡ 90 ರಷ್ಟು ಎಸೆಸೆಲ್ಸಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯಲ್ಲಿ ಫೇಲ್ ಆಗಲಿದ್ದಾರೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಭವಿಷ್ಯ ನುಡಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ನಗರದ ಹಾರ್ಡಿಂಗ್ ವೃತ್ತದಲ್ಲಿ ರವಿವಾರ ಜಟಕಾ ಗಾಡಿ ಹತ್ತಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಟಾಲ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡುತ್ತಾ, ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನ ಪಾಸ್ ಮಾಡಬೇಕು ಅಂತ ಹೇಳಿದರೂ ರಾಜ್ಯ ಸರ್ಕಾರ ಪರೀಕ್ಷೆ ನಡೆಸುತ್ತಿದೆ. ಸಚಿವ ಸುರೇಶ್ ಕುಮಾರ್ ತಮ್ಮದೆ ನಿಲುವಲ್ಲಿ ಪರೀಕ್ಷೆ ನಡೆಸುತ್ತಾ ಇದ್ದಾರೆ ಎಂದು ಕಿಡಿಕಾರಿದರು.
ಈಗಾಗಲೇ ಸಿಬಿಎಸ್ಇ ಪರೀಕ್ಷೆಗಳನ್ನ ಕೇಂದ್ರ ಸರ್ಕಾರ ರದ್ದುಪಡಿಸಿ ಅಲ್ಲಿನ ವಿದ್ಯಾರ್ಥಿಗಳನ್ನು ಪಾಸ್ ಮಾಡಿದೆ. ವಿವಿಧ ರಾಜ್ಯ ಸರ್ಕಾರಗಳು ಸಹ ಇದೇ ಮಾದರಿ ಅನುಸರಿಸಿ ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದಾರೆ. ಆದರೆ ಕರ್ನಾಟಕ ಸರ್ಕಾರ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆ ಫಲಿತಾಂಶದಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಫೇಲ್ ಆಗಲಿದ್ದಾರೆ. ಆಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಏರ್ಪಡುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದರು.





