ಕೊರೋನ ಮಾರ್ಗಸೂಚಿ ಉಲ್ಲಂಘಿಸುವ ಜನಪ್ರತಿನಿಧಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಜು.17: ಕೊರೋನ ಮಾರ್ಗಸೂಚಿ ಉಲ್ಲಂಘಿಸುವ ಜನಪ್ರತಿನಿಧಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ.
ಕೊರೋನ ಮಾರ್ಗಸೂಚಿಗಳನ್ನು ಜನಪ್ರತಿನಿಧಿಗಳು ಹಾಗೂ ಚಲನಚಿತ್ರ ನಟರು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಸಚಿವ ಶ್ರೀರಾಮುಲು, ಶಾಸಕ ಎಸ್.ಆರ್.ವಿಶ್ವನಾಥ್, ಪಿ.ಟಿ.ಪರಮೇಶ್ವರ್ ನಾಯಕ್, ನಟ ರಾಘವೇಂದ್ರ ರಾಜ್‍ಕುಮಾರ್ ಇವರೆಲ್ಲರೂ ಮದುವೆ ಸಮಾರಂಭ, ಕೆಂಪೇಗೌಡ ಪುತ್ಥಳಿ ಶಂಕುಸ್ಥಾಪನೆ ಸೇರಿ ಇನ್ನಿತರ ಸಂದರ್ಭಗಳಲ್ಲಿ ಕೊರೋನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಯಾರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೊರೋನ ನಿಯಮ ಉಲ್ಲಂಘಿಸಿರುವುದು ಕಂಡು ಬಂದರೆ ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸೂಕ್ತ ಕ್ರಮ ಜರುಗಿಸಬೇಕೆಂದು ಸರಕಾರಕ್ಕೆ ಆದೇಶ ನೀಡಿ, ವಿಚಾರಣೆಯನ್ನು ಮುಂದೂಡಿತು.





