ಉಡುಪಿ: ಜಿಲ್ಲೆಯಲ್ಲಿ ಮತ್ತೆ ಶತಕದ ಗಡಿ ದಾಟಿದ ಕೊರೋನ ಪಾಸಿಟಿವ್ ಸಂಖ್ಯೆ
ಎರಡು ಸಾವಿರ ದಾಟಿದ ಒಟ್ಟು ಸೋಂಕಿತರ ಸಂಖ್ಯೆ
ಸಾಂದರ್ಭಿಕ ಚಿತ್ರ
ಉಡುಪಿ, ಜು.17: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದವರ ಸಂಖ್ಯೆ ಶನಿವಾರ ಮತ್ತೊಮ್ಮೆ ಶತಕದ ಗಡಿ ದಾಟಿತು. ಇಂದು ಒಟ್ಟು 109 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಆಗಿದ್ದಾರೆ. ಅಲ್ಲದೇ ದಿನದಲ್ಲಿ 292 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಶನಿವಾರ ಕೊರೋನ ಸೋಂಕು ಪತ್ತೆಯಾದ 109 ಮಂದಿಯಲ್ಲಿ ಉಡುಪಿ ತಾಲೂಕಿನ 58 ಮಂದಿ, ಕುಂದಾಪುರ ತಾಲೂಕಿನ 40 ಮಂದಿ ಹಾಗೂ ಕಾರ್ಕಳ ತಾಲೂಕಿನ 11 ಮಂದಿ ಸೇರಿದ್ದಾರೆ. 63 ಪುರುಷರು, 39 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ ಐವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಸೇರಿದಂತೆ ಒಟ್ಟು 7 ಮಂದಿ ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದ ಡಿಎಚ್ಓ, ಇಂದಿನ 109 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ ಎರಡು ಸಾವಿರದ ಗಡಿದಾಟಿ 2088ಕ್ಕೇರಿದೆ ಎಂದರು.
ಇಂದು ಪಾಸಿಟಿವ್ ಬಂದವರಲ್ಲಿ ಇಬ್ಬರು ಬೆಂಗಳೂರಿನಿಂದ ತಲಾ ಒಬ್ಬರು ಮಂಗಳೂರು, ದುಬೈ ಮತ್ತು ದಾವಣಗೆರೆಯಿಂದ ಬಂದವರಾದರೆ, 34 ಮಂದಿ ಶೀತಜ್ವರದಿಂದ, ಐವರು ಉಸಿರಾಟ ತೊಂದರೆಯಿಂದ ನರಳುತಿದ್ದರು. ಉಳಿದ 65 ಮಂದಿ ಜಿಲ್ಲೆಯಲ್ಲಿ ಈಗಾಗಲೇ ಸೋಂಕಿಗೆ ಪಾಸಿಟಿವ್ ಬಂದ ಪ್ರಾಥಮಿಕ ಸಂಪರ್ಕಿತರಾದವರಾಗಿದ್ದಾರೆ ಎಂದು ಡಾ.ಸೂಡ ವಿವರಿಸಿದರು.
43 ಮಂದಿ ಗುಣಮುಖ: ಜಿಲ್ಲೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾದ 43 ಮಂದಿ ಇಂದು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದಾರೆ. ಇವರಲ್ಲಿ 9 ಮಂದಿ ಡಾ.ಟಿಎಂಎ ಪೈ ಆಸ್ಪತ್ರೆಯಿಂದ ಉಳಿದ 34 ಮಂದಿ ಕುಂದಾಪುರದ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಗೊಂಡವರ ಸಂಖ್ಯೆ 1586ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 492 ಮಂದಿ ಜಿಲ್ಲೆಯಲ್ಲಿ ಇನ್ನೂ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
524 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಶನಿವಾರ ಇನ್ನೂ 524 ಮಂದಿಯ ಗಂಟಲುದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 17 ಮಂದಿ, ಕೋವಿಡ್ ಸಂಪರ್ಕಿತರು 317 ಮಂದಿ ಇದ್ದರೆ, ಉಸಿರಾಟ ತೊಂದರೆಯ ಎಂಟು ಮಂದಿ, ಶೀತಜ್ವರದಿಂದ ಬಳಲುವ 88 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಬಂದ 96 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪಡೆದ ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 24,382ಕ್ಕೇರಿದೆ. ಇವುಗಳಲ್ಲಿ ಈವರೆಗೆ 21,757 ನೆಗೆಟಿವ್, 2088 ಪಾಸಿಟಿವ್ ಬಂದಿವೆ. ಈವರೆಗೆ ಜಿಲ್ಲೆಯಲ್ಲಿ ಹತ್ತು ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 537 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ. ಇಂದು 50 ಮಂದಿಯನ್ನು ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ. ಇವರಲ್ಲಿ ಒಬ್ಬರು ಕೋವಿಡ್ ಶಂಕಿತರು, 16 ಮಂದಿ ಉಸಿರಾಟ ತೊಂದರೆಯವರು ಹಾಗೂ 33 ಮಂದಿ ಶೀತಜ್ವರದಿಂದ ಬಲು ವವರು ಸೇರಿದ್ದಾರೆ ಎಂದರು.
ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ಗಳಿಂದ ಇಂದು 31 ಮಂದಿ ಬಿಡುಗಡೆಗೊಂಡಿದ್ದು, 182 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 73 ಮಂದಿ ಸೇರಿದಂತೆ ಒಟ್ಟು 7072 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿ ಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 2197 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದರು.