ಪಿಯು ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ನೀಡಿ: ರಮೇಶ್ ಬಾಬು
ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪತ್ರ

ಬೆಂಗಳೂರು, ಜು.19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪದವಿಪೂರ್ವ ಕಾಲೇಜು ಶಿಕ್ಷಕರು ಮನೆಯಿಂದಲೇ ಕಾರ್ಯನಿರ್ವಹಿಸುವುದಕ್ಕೆ ಅವಕಾಶ ಕಲ್ಪಿಸಬೇಕೆಂದು ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಕೋವಿಡ್-19ರ ಮುಂಜಾಗ್ರತಾ ಕ್ರಮವಾಗಿ ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ ರಾಜ್ಯದ ಎಲ್ಲ ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ. ಇದೇ ಇಲಾಖೆಯಡಿ ಬರುವ ಪಿಯು ಉಪನ್ಯಾಸಕರು ಹಾಗೂ ಸಿಬ್ಬಂದಿಗಳಿಗೂ ಈ ಅವಕಾಶ ನೀಡಬೇಕು.
ಸರಕಾರ ಮತ್ತು ಸಾರ್ವಜನಿಕರ ಎಲ್ಲ ಪ್ರಯತ್ನಗಳ ನಡುವೆಯೂ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲೆ ಇವೆ. ಈ ಸಂಬಂಧ ಮತ್ತಷ್ಟು ಮುಂಜಾಗ್ರತಾ ಕ್ರಮವಾಗಿ ಮೌಲ್ಯಮಾಪನ ಕಾರ್ಯ ಮತ್ತು ಕೋವಿಡ್ ಕಾರ್ಯದಲ್ಲಿ ನಿಯೋಜನೆಗೊಂಡವರನ್ನು ಹೊರತು ಪಡಿಸಿ ಉಳಿದ ಪಿಯು ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಮನೆಯಿಂದ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ಅವರು ಪತ್ರದ ಮುಖೇನ ಮನವಿ ಮಾಡಿದ್ದಾರೆ.





