ಉಡುಪಿ: ಮಂಗಳವಾರ 84 ಮಂದಿಗೆ ಕೊರೋನ ಪಾಸಿಟಿವ್
ಸಾಂದರ್ಭಿಕ ಚಿತ್ರ
ಉಡುಪಿ, ಜು.21: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಪಾಸಿಟಿವ್ ಆಗಿರುವವರ ಸಂಖ್ಯೆ ಮಂಗಳವಾರ 84 ಆಗಿದೆ. ದಿನದಲ್ಲಿ 103 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ದಿನದಲ್ಲಿ ಕೊರೋನ ಸೋಂಕು ಪತ್ತೆಯಾದ 84 ಮಂದಿಯಲ್ಲಿ ಉಡುಪಿ ತಾಲೂಕಿನ 37 ಮಂದಿ, ಕುಂದಾಪುರ ತಾಲೂಕಿನ 43 ಮಂದಿ ಹಾಗೂ ಕಾರ್ಕಳ ತಾಲೂಕಿನ 4 ಮಂದಿ ಸೇರಿದ್ದಾರೆ. 48 ಮಂದಿ ಪುರುಷರು, 34 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ ತಲಾ ಒಬ್ಬ ಬಾಲಕ ಹಾಗೂ ಬಾಲಕಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇಂದಿನ 84 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 2405ಕ್ಕೇರಿದೆ ಎಂದರು.
ಇದರೊಂದಿಗೆ ಉಡುಪಿ ಜಿಲ್ಲೆ 2,405 ಪಾಸಿಟಿವ್ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿದೆ. ಬೆಂಗಳೂರು ನಗರ 34,943 ಪ್ರಕರಣಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಉಳಿದಂತೆ ದ.ಕ.-3829, ಕಲಬುರಗಿ-2969, ಬಳ್ಳಾರಿ-2829, ಧಾರವಾಡ-2327, ಮೈಸೂರು-1908, ವಿಜಯಪುರ-1758, ಯಾದಗಿರಿ-1713, ಬೀದರ್- 1469, ಉತ್ತರ ಕನ್ನಡ-1272, ಬೆಳಗಾವಿ-1096, ಹಾಸನ-1059, ರಾಯಚೂರು-1003 ಪ್ರಕರಣಗಳೊಂದಿಗೆ ಕ್ರಮವಾಗಿ ಎರಡರಿಂದ 14ರವರೆಗಿನ ಸ್ಥಾನದಲ್ಲಿವೆ.
92 ಮಂದಿ ಗುಣಮುಖ: ಜಿಲ್ಲೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾದ 92 ಮಂದಿ ಇಂದು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದಾರೆ. ಇವರಲ್ಲಿ ಉಡುಪಿ ಟಿಎಂಎ ಪೈ ಆಸ್ಪತ್ರೆಯಿಂದ 16 ಮಂದಿ, ಕಾರ್ಕಳ ಸರಕಾರಿ ಆಸ್ಪತ್ರೆಯಿಂದ 20 ಮಂದಿ ಹಾಗೂ ಕುಂದಾಪುರದ ಸರಕಾರಿ ಆಸ್ಪತ್ರೆಯಿಂದ 56 ಮಂದಿ ಸೇರಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖ ರಾಗಿ ಬಿಡುಗಡೆಗೊಂಡವರ ಸಂಖ್ಯೆ 1742ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 653 ಮಂದಿ ಜಿಲ್ಲೆಯಲ್ಲಿ ಸದ್ಯ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.
455 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಮಂಗಳವಾರ 455 ಮಂದಿಯ ಗಂಟಲುದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 87 ಮಂದಿ, ಕೋವಿಡ್ ಸಂಪರ್ಕಿತರು 238 ಮಂದಿ ಇದ್ದರೆ, ಉಸಿರಾಟ ತೊಂದರೆಯ 8, ಶೀತಜ್ವರದಿಂದ ಬಳಲುವ 77 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಬಂದ 45 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪಡೆದ ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 25,346ಕ್ಕೇರಿದೆ. ಇವುಗಳಲ್ಲಿ ಈವರೆಗೆ 22,460 ನೆಗೆಟಿವ್, 2405 ಪಾಸಿಟಿವ್ ಬಂದಿವೆ. ಈವರೆಗೆ ಜಿಲ್ಲೆಯಲ್ಲಿ 10 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 481 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ. ಇಂದು 27 ಮಂದಿಯನ್ನು ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ. ಇವರಲ್ಲಿ ನಾಲ್ವರು ಕೋವಿಡ್ ಶಂಕಿತರು, 11 ಮಂದಿ ಉಸಿರಾಟ ತೊಂದರೆಯವರು ಹಾಗೂ 12 ಮಂದಿ ಶೀತಜ್ವರದಿಂದ ಬಳಲುವವರು ಸೇರಿದ್ದಾರೆ ಎಂದರು.
ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ಗಳಿಂದ ಇಂದು 12 ಮಂದಿ ಬಿಡುಗಡೆಗೊಂಡಿದ್ದು, 197 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 59 ಮಂದಿ ಸೇರಿದಂತೆ ಒಟ್ಟು 7285 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 2013 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
ಬೈಂದೂರು ಸಿಎಚ್ಸಿ ಸೀಲ್ಡೌನ್: ಕುಂದಾಪುರ ಸರಕಾರಿ ಆಸ್ಪತ್ರೆಯ ಓರ್ವ ವೈದ್ಯರು, ಐರೋಡಿಯ ಮಹಿಳಾ ವೈದ್ಯರೊಬ್ಬರು ಇಂದು ಸಾಪಿಸಿಟ್ ಬಂದವರಲ್ಲಿ ಸೇರಿದ್ದಾರೆ. ಅಲ್ಲದೇ ಇಬ್ಬರು ಸ್ಟಾಫ್ ನರ್ಸ್ಗಳು ಹಾಗೂ ಇಬ್ಬರು ಗ್ರೂಪ್ ಡಿ ನೌಕರರು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಡಿಎಚ್ಓ ಡಾ.ಸೂಡ ತಿಳಿಸಿದರು.
ಎಲ್ಲಾ ನಾಲ್ವರು ಸೋಂಕಿತರನ್ನು ಕುಂದಾಪುರ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದವರನ್ನು ಹೋಮ್ ಕ್ವಾರಂಟೈನ್ನಲ್ಲಿರಿಸಿ ಅವರ ಗಂಟಲು ದ್ರವ ಮಾದರಿಯ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ ಎಂದವರು ಹೇಳಿದರು.