ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ಸಿಪಿಐ ಒತ್ತಾಯ
ಬೆಂಗಳೂರು, ಜು.23: ಕೋವಿಡ್ ಪರಿಕರಗಳ ಖರೀದಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್ ಸಂಕಷ್ಟದ ಸಮಯದಲ್ಲಿಯೂ ರಾಜ್ಯ ಸರಕಾರ ನಡೆಸಿರುವ ಭ್ರಷ್ಟಾಚಾರವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಂಕಿ ಅಂಶ ಹಾಗೂ ದಾಖಲೆಗಳ ಸಮೇತವಾಗಿ ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ.
ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ನಿಜವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ದಾಖಲೆ ಸಮೇತವಾಗಿ ಮಾಡಿರುವ ಆರೋಪಗಳು ಮೇಲ್ನೋಟಕ್ಕೆ ಅವ್ಯವಹಾರಗಳು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಹೀಗಾಗಿ ಪ್ರಕರಣದ ಸಂಬಂಧ ಸತ್ಯಾಸತ್ಯತೆಗಳು ರಾಜ್ಯದ ಜನತೆಗೆ ತಿಳಿಯಬೇಕಾದರೆ ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಪ್ರಕಟನೆ ಮೂಲಕ ಒತ್ತಾಯಿಸಿದ್ದಾರೆ.





