ಬೆಂಗಳೂರು: ಕೋವಿಡ್ ಗೆ ಮತ್ತೆ 29 ಮಂದಿ ಬಲಿ, 1,950 ಹೊಸ ಪ್ರಕರಣಗಳು ದೃಢ

ಬೆಂಗಳೂರು, ಜು.26: ನಗರದಲ್ಲಿ ರವಿವಾರ 1950 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಸೋಂಕಿಗೆ ಮತ್ತೆ 29 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 45,453 ಸೋಂಕಿತರು ಧೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 891 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 11,405 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 33,156 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 42,769 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಚಿಕಿತ್ಸೆ ಸಿಗದೆ ಪೌರಕಾರ್ಮಿಕ ಸಾವು: ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೆ ಮತ್ತೊಬ್ಬ ಪೌರಕಾರ್ಮಿಕ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪುಲಿಕೇಶಿನಗರ ಸಬ್ ಡಿವಿಷನ್ ವಾರ್ಡ್ ನಂಬರ್ 61ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೌರಕಾರ್ಮಿಕನಿಗೆ ಶನಿವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ, ರಾತ್ರಿ 9 ಗಂಟೆಯವರೆಗೆ ಎಲ್ಲಿಯೂ ವೆಂಟಿಲೇಟರ್ ಮತ್ತು ಬೆಡ್ ಸಿಗಲಿಲ್ಲ ಎಂದು ಆರೋಪಿಸಲಾಗಿದ್ದು, ದೇವನಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಪೌರಕಾರ್ಮಿಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಬಿಬಿಎಂಪಿ ಅಟೆಂಡರ್ ಮೃತ: ಬಿಬಿಎಂಪಿಯ ಪುಲಿಕೇಶಿನಗರ ಉಪವಿಭಾಗ ಕಚೇರಿಯ ಅಟೆಂಡರ್ ಕೊರೋನಕ್ಕೆ ಮೃತಪಟ್ಟಿದ್ದಾರೆ. ಅವರಿಗೆ ಕೆಲ ದಿನಗಳಿಂದ ಆರೋಗ್ಯ ಸರಿ ಇರಲಿಲ್ಲ. ಹಾಗಾಗಿ ಐದು ದಿನಗಳಿಂದ ಕಚೇರಿಗೆ ಹೋಗಿರಲಿಲ್ಲ. ಶುಕ್ರವಾರ ಜ್ವರ ಕಾಣಿಸಿಕೊಂಡಿತ್ತು. ಕೊರೋನ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು.
ಅವರನ್ನು ಸಿ.ವಿ.ರಾಮನ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಸಿ.ವಿ.ರಾಮನ್ ನಗರದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆ ಇರಲಿಲ್ಲ. ಹಾಗಾಗಿ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಯಿತು. ಕೊನೆಗೆ ದೇವನಹಳ್ಳಿಯ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.







