ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಸುರೇಶ್ ಅಂಗಡಿ ಸೂಚನೆ

ಬೆಳಗಾವಿ, ಜು.27: ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದುದರಿಂದ, ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಸೂಚನೆ ನೀಡಿದರು.
ಸೋಮವಾರ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸ್ಮಾಟ್‍ಸಿಟಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕೆಲವು ಕಾಮಗಾರಿಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ತಿಗಳ ಮೌಲ್ಯಮಾಪನ ಮಾಡಿ ಪುನರ್ವಸತಿ ಅಥವಾ ಸ್ಥಳಾಂತರ ಬಗ್ಗೆ ವರದಿ ನೀಡಿದರೆ ರಾಜ್ಯ ಸರಕಾರದ ಜತೆ ಚರ್ಚಿಸಿ ಅಗತ್ಯ ಅನುದಾನ ಪಡೆಯಲಾಗುವುದು. ಜಮೀನು ಹಸ್ತಾಂತರಕ್ಕೆ ಸಂಬಂಧಿಸಿದಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಶೀಘ್ರ ಅನುಮೋದನೆ ಪಡೆಯಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಬೆಳಗಾವಿ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಮೂವತ್ತು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯಗಳನ್ನು ಒದಗಿಸಲು ಮತ್ತು ಸ್ಮಾರ್ಟ್‍ಸಿಟಿ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಸುರೇಶ್ ಅಂಗಡಿ ಹೇಳಿದರು.
ಕಾಮಗಾರಿ ತ್ವರಿತಗೊಳಿಸಲು ಸೂಚನೆ: ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಚುರುಕುಗೊಳಿಸಲು ಅಗತ್ಯವಿರುವ ಕ್ರಮಗಳನ್ನು ತ್ವರಿತವಾಗಿ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಇದೇ ವೇಳೆ ಮಾತನಾಡಿದ ಎಂ.ಎಲ್.ಐ.ಆರ್.ಸಿ.ಯ ಬ್ರಿಗೇಡಿಯರ್ ಚೌಧರಿ, ಬಸ್ ನಿಲ್ದಾಣಕ್ಕೆ ಜಮೀನನ್ನು ಹಸ್ತಾಂತರಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವ ರಕ್ಷಣಾ ಇಲಾಖೆಗೆ ಕಳಿಸಲಾಗಿದ್ದು, ಅಲ್ಲಿಂದ ಅನುಮೋದನೆ ದೊರೆಯಬೇಕಿದೆ ಎಂದು ಹೇಳಿದರು.
ಸಾರ್ವಜನಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವುದಕ್ಕೆ ಅನುಕೂಲವಾಗುವಂತೆ ಪ್ರಸ್ತಾವ ಸಿದ್ಧಪಡಿಸಲಾಗುವುದು. ಬಸ್ ನಿಲ್ದಾಣದ ಜಮೀನು ಹಸ್ತಾಂತರ ಹೊರತುಪಡಿಸಿದರೆ ಇದುವರೆಗೆ ರಾಜ್ಯ ಸರಕಾರಕ್ಕೆ ಕಳುಹಿಸಿದ ಯಾವುದೇ ಪ್ರಸ್ತಾವ ಬಾಕಿ ಉಳಿದಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಮಾತನಾಡಿ, ಸಾಂವಗಾಂವ ರಸ್ತೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಪ್ರಸ್ತಾವ ರಕ್ಷಣಾ ಇಲಾಖೆಗೆ ಸಲ್ಲಿಸುವಂತೆ ಬ್ರಿಗೇಡಿಯರ್ ಅವರನ್ನು ಕೋರಿದರು.
ಬೆಳಗಾವಿ ನಗರದ ಜನರ ಅನುಕೂಲ ಕಲ್ಪಿಸಲು ರೂಪಿಸಲಾಗುವ ರಸ್ತೆ ಮತ್ತಿತರ ಮೂಲಸೌಕರ್ಯ ಯೋಜನೆಗೆ ಸಕಾರಾತ್ಮಕ ವರದಿಯನ್ನು ಕಳಿಸಬೇಕು. ಅಂದಾಗ ಮಾತ್ರ ಯೋಜನೆ ಅನುಷ್ಠಾನ ವೇಗ ಪಡೆದುಕೊಳ್ಳಲಿದ್ದು, ಸಾರ್ವಜನಿಕರಿಗೂ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ವರದಿ ಸಲ್ಲಿಸಲು ಜಿಲ್ಲಾಧಿಕಾರಿ ನಿರ್ದೇಶನ: ಕಾಮಗಾರಿ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ತಿದಾರರ ಪುನರ್ವಸತಿ ಮತ್ತು ಸ್ಥಳಾಂತರ ಕುರಿತು ಸಮಗ್ರವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಬಸ್ ನಿಲ್ದಾಣ ಬಳಿಯ ಜಮೀನು ಹಸ್ತಾಂತರ: ರಾಯಚೂರು-ಬಾಚಿ ರಸ್ತೆ (ಎಸ್.ಎಚ್.20) ಗಾಂಧಿನಗರದಿಂದ ಅಶೋಕ ವೃತ್ತದವರೆಗೆ ರಸ್ತೆ ನಿರ್ಮಾಣ; ಸಂಚಯನಿ ವೃತ್ತದಿಂದ ಮೀನು ಮಾರ್ಕೆಟ್‍ವರೆಗೆ ಸ್ಮಾರ್ಟ್ ಸಿಟಿ ರಸ್ತೆ ನಿರ್ಮಾಣ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ಸ್ಮಾರ್ಟ್‍ಸಿಟಿ, ಲೋಕೋಪಯೋಗಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.







