ಕಳಸಾ ಬಂಡೂರಿ; ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಒಪ್ಪಿಗೆ ನೀಡಿದ ಸರಕಾರ
ಸಚಿವ ರಮೇಶ್ ಜಾರಕಿಹೊಳಿ ಹರ್ಷ
ಬೆಂಗಳೂರು, ಜು.28: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ.ಎಂ.ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರಿ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ.ಎಂ.ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಮಹತ್ವಾಕಾಂಕ್ಷೆಯ ಈ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಭಿನಂದಿಸಿದ್ದಾರೆ.
ರಾಜ್ಯ ಸರಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರಕಾರ ಕಟಿಬದ್ಧವಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.