ದ.ಕ.: 229 ಮಂದಿಗೆ ಕೊರೋನ ಸೋಂಕು; ಕೋವಿಡ್‌ಗೆ ಏಳು ಬಲಿ

ಮಂಗಳೂರು, ಆ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ರವಿವಾರ 229 ಮಂದಿಗೆ ಕೊರೋನ ಪಾಸಿಟಿವ್ ಕಂಡುಬಂದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ.
ಮಂಗಳೂರು ತಾಲೂಕಿನಲ್ಲಿ ಮೂರು ಮಂದಿ ಮತ್ತು ಇತರ ಜಿಲ್ಲೆಯ ನಾಲ್ಕು ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ269ಕ್ಕೆ ಏರಿಕೆಯಾಗಿದೆ.
ರವಿವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ 22 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. 123 ಸಾಮಾನ್ಯ ಶೀತಜ್ವರ ಪ್ರಕರಣ, 6 ಉಸಿರಾಟ ಸಮಸ್ಯೆಯ ಪ್ರಕರಣ ಪತ್ತೆಯಾಗಿದ್ದು, 78 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ.
ಜಿಲ್ಲೆಯಲ್ಲಿ ಇದುವರೆಗೆ 70,712 ಮಂದಿಯ ಗಂಟಲ ದ್ರವ ಮಾದರಿಯ ಪರೀಕ್ಷೆ ನಡೆದಿದ್ದು, 8,878 ಪಾಸಿಟಿವ್ ಪ್ರಕರಣಗಳು ಮತ್ತು 61,834 ನೆಗೆಟಿವ್ ಪ್ರಕರಣಗಳು ಪತ್ತೆಯಾಗಿವೆ.
128 ಮಂದಿ ಡಿಸ್ಚಾರ್ಜ್: ಕೊರೋನ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 128 ಮಂದಿ ರವಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಇದುವರೆಗೆ 6,445 ಮಂದಿ ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಸದ್ಯ ಆಸ್ಪತ್ರೆಯಲ್ಲಿ 2,164 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.





