ಪೊಲೀಸ್ ಆಯುಕ್ತರು ಬಿಜೆಪಿ ಏಜೆಂಟರಂತೆ ವರ್ತಿಸಬಾರದು: ಡಿ.ಕೆ.ಶಿವಕುಮಾರ್
ಬೆಂಗಳೂರು ಹಿಂಸಾಚಾರ ಪ್ರಕರಣ

ಬೆಂಗಳೂರು, ಆ.20: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರು ಬಿಜೆಪಿ ಏಜೆಂಟರಂತೆ ವರ್ತಿಸಬಾರದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜೆ ಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಬಿಜೆಪಿ ಸೂಚನೆಯಂತೆ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವ ಷಡ್ಯಂತ್ರಗಳು ನಡೆಯುತ್ತಿವೆ. ಇದನ್ನು ಮುಂದುವರಿಸಿದರೆ ಪೊಲೀಸ್ ಇಲಾಖೆಯ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಗಲಭೆಗೆ ಪೊಲೀಸ್ ಇಲಾಖೆಯ ವೈಫಲ್ಯ ಕಾರಣವಾಗಿದೆ. ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲು ಪೊಲೀಸರು ವಿಫಲರಾಗಿದ್ದಾರೆ. ಇದಕ್ಕೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಕಾಂಗ್ರೆಸ್ ಮೇಲೆ ಆರೋಪ ಮಾಡುವುದು ಸರಿಯಲ್ಲ. ಸಂವಿಧಾನದಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ. ತಪ್ಪು ಮಾಡಿದವರನ್ನು ಶಿಕ್ಷೆಗೆ ಒಳಪಡಿಸಿ. ಕಾನೂನು ಕೈಗೆತ್ತಿಕೊಂಡವರನ್ನು ಬಂಧಿಸಿ. ಆದರೆ, ಕೇವಲ ಬಂಧಿತರ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಅಮಾಯಕರನ್ನು ಬಂಧಿಸಿದರೆ ನಾವು ಸುಮ್ಮನಿರುವುದಿಲ್ಲವೆಂದು ಅವರು ಹೇಳಿದರು.
ಬಿಜೆಪಿ ಸಚಿವರ ತಪ್ಪುಗಳನ್ನು ಮರೆಮಾಚಲು ಕಾಂಗ್ರೆಸ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ನಾನು ಪಕ್ಷದ ಅಧ್ಯಕ್ಷನಾಗಿದ್ದು, ನಮ್ಮ ಯಾವುದೇ ಒಬ್ಬ ಕಾರ್ಯಕರ್ತನ ವಿರುದ್ಧ ಸುಳ್ಳು ಆರೋಪ ಮಾಡಿದರೂ ಅವರ ಪರವಾಗಿ ನಿಂತು ಹೋರಾಡುತ್ತೇನೆ. ಅದು ನನ್ನ ಧರ್ಮವಾಗಿದೆ. ನಮಗೆ ನಿಮ್ಮ ಕಾರ್ಯವೈಖರಿಯ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಪ್ರಕರಣದ ತನಿಖೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಬೇಕು.
-ಡಿ.ಕೆ.ಶಿವಕುಮಾರ್, ಅಧ್ಯಕ್ಷ, ಕೆಪಿಸಿಸಿ







