ಮೈಸೂರು: ಸಿಎಂ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ ರೈತರ ಬಂಧನ, ಬಿಡುಗಡೆ
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ರೈತರ ಆಕ್ರೋಶ

ಮೈಸೂರು,ಆ.21: ಸರಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ಅನೇಕ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪವಿರುದ್ಧ ಕಪ್ಪುಬಾವುಟ ಪ್ರದರ್ಶನ ಮಾಡಲು ತೆರಳುತ್ತಿದ್ದ ರೈತರು ಸೇರಿದಂತೆ ದಸಂಸ ಕಾರ್ಯಕರ್ತರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪಶುಕ್ರವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದರು. ಈ ವೇಳೆ ಅವರಿಗೆ ಕಪ್ಪುಬಾವುಟ ಪ್ರದರ್ಶನ ಮಾಡುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಸ್ವರಾಜ್ ಇಂಡಿಯಾ ಪಕ್ಷ ಜನಾಂದೋಲ ಮಹಾಮೈತ್ರಿಯ ನೂರಾರು ಕಾರ್ಯಕರ್ತರು ಆಗಮಿಸುತ್ತಿದ್ದ ವೇಳೆ ಕಬಿನಿ ಜಲಾಶಯದ 5 ಕೀ.ಮೀ. ಹಿಂದೆ ಇರುವ ಕೆ.ಜಿ.ಸರ್ಕಲ್ ಬಳಿ ಅವರನ್ನು ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಸುಮಾರು ಎರಡು ಗಂಟೆ ಧರಣಿ ಕುಳಿತರು.
ಮುಖ್ಯಮಂತ್ರಿ ಆಗಮಿಸುತ್ತಿದ್ದಂತೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಭೇದಿಸಿ ಒಳ ಪ್ರವೇಶಿಸಲು ಯತ್ನಿಸಿದ ರೈತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಈ ವೇಳೆ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಮಾತನಾಡಿ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರ ಬದುಕಿನ ಚೊತೆ ಚೆಲ್ಲಾಟವಾಡುತ್ತಿರುವ ಬಿಜೆಪಿ ಸರಕಾರದ ವಿರುದ್ಧ ನಿರಂತರ ಹೋರಾಟ ಮುಂದುವರಿಯುತ್ತದೆ ಎಂದರು.
ರೈತ ಸಂಘದ ಹೊಸಕೋಟೆ ಬಸವರಾಜು, ಹೊಸೂರು ಕುಮಾರ್, ಪಿ.ಮರಂಕಯ್ಯ, ಚಿಕ್ಕಣ್ಣ ನಾಯ್ಕ, ದಸಂಸ ಮುಖಂಡರುಗಳಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಕಾರ್ಯ ಬಸವಣ್ಣ, ಶಂಭುಲಿಂಗಸ್ವಾಮಿ, ರತ್ನಪುರಿ ಪುಟ್ಟಸ್ವಾಮಿ, ಸ್ವರಾಜ್ ಇಂಡಿಯಾದ ಅಭಿರುಚಿ ಗಣೇಶ್, ಉಗ್ರ ನರಸಿಂಹೇಗೌಡ, ವಕೀಲ ಪುನೀತ್, ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ವಶಕ್ಕೆ ಪ್ರತಿಭಟನಾಕಾರರನ್ನು ಸ್ವಲ್ಪ ಹೊತ್ತಲ್ಲಿ ಪೊಲೀಸರು ಬಿಡುಗಡೆಗೊಳಿಸಿದರು.






.gif)
.gif)
.gif)

