ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಗೆ 2 ಬಲಿ, 117 ಮಂದಿಯಲ್ಲಿ ಕೊರೋನ ಸೋಂಕು ದೃಢ
ಉಡುಪಿ, ಆ. 23: ಕೋವಿಡ್-19ಕ್ಕೆ ಜಿಲ್ಲೆಯಲ್ಲಿ ರವಿವಾರ ಇಬ್ಬರು ಸಾವನ್ನಪ್ಪಿದ್ದು, ದಿನದಲ್ಲಿ ಒಟ್ಟು 117 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 10,133ನ್ನು ತಲುಪಿದೆ. ದಿನದಲ್ಲಿ 372 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಕೋವಿಡ್ ಪಾಸಿಟಿವ್ ಪತ್ತೆಯಾದ 117 ಮಂದಿಯಲ್ಲಿ ಉಡುಪಿ ತಾಲೂಕಿನ 58 ಮಂದಿ, ಕುಂದಾಪುರ ತಾಲೂಕಿನ 35 ಹಾಗೂ ಕಾರ್ಕಳ ತಾಲೂಕಿನ 20 ಮಂದಿ ಸೇರಿದ್ದು, ಉಳಿದಂತೆ ಹೊರಜಿಲ್ಲೆಯ ನಾಲ್ವರು ಚಿಕಿತ್ಸೆಗೆಂದು ಜಿಲ್ಲೆಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 65 ಮಂದಿ ಪುರುಷರು ಹಾಗೂ 52 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ತಲಾ 39 ಮಂದಿ ಪುರುಷರು ಹಾಗೂ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂದು ಡಾ.ಸೂಡ ತಿಳಿಸಿದರು.
ರವಿವಾರ ಪಾಸಿಟಿವ್ ದೃಢಗೊಂಡ 117 ಮಂದಿಯಲ್ಲಿ 68 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 30 ಮಂದಿ ಶೀತಜ್ವರದಿಂದ, ನಾಲ್ವರು ಉಸಿರಾಟ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ದೇಶೀಯ ಪ್ರವಾಸದಿಂದ ಮರಳಿದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ 14 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.
309 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಇಂದು 309 ಮಂದಿ ಚಿಕಿತ್ಸೆಯ ನಂತರ ರೋಗದಿಂದ ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 154 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 155 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 7401ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2648 ಮಂದಿ ಇನ್ನೂ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1065 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1583 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ಹೇಳಿದರು.
967 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ರವಿವಾರ ಒಟ್ಟು 967 ಮಂದಿಯ ಗಂಟಲುದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 118 ಮಂದಿ, ಕೋವಿಡ್ ಸಂಪರ್ಕಿತರು 140 ಮಂದಿ ಇದ್ದರೆ, ಉಸಿರಾಟ ತೊಂದರೆಯ ಆರು ಮಂದಿ, ಶೀತಜ್ವರ ದಿಂದ ಬಳಲುವ 46 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಆಗಮಿಸಿದ 657 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪರೀಕ್ಷೆಗಾಗಿ ಪಡೆದ 967 ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 64,892ಕ್ಕೇರಿದೆ. ಇವುಗಳಲ್ಲಿ ಈವರೆಗೆ 53,429 ನೆಗೆಟಿವ್, 10133 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 84 ಮಂದಿ ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಇನ್ನು ಒಟ್ಟು 1330 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.
ಜಿಲ್ಲೆಯಲ್ಲಿ ಇಂದು 117 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ. ಇವರಲ್ಲಿ ಒಟ್ಟು 46 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 71 ಮಂದಿ ಹೋಮ್ ಐಸೋಲೇಷನ್ನಲ್ಲಿ ಇದ್ದಾರೆ ಎಂದು ಅವರು ಹೇಳಿದರು.
ಇಬ್ಬರ ಸಾವು: ಕೋವಿಡ್-19ರ ಸೋಂಕಿನೊಂದಿಗೆ ಇಂದು ಇಬ್ಬರು ಮೃತ ಪಟ್ಟಿರುವುದಾಗಿ ಡಾ.ಸೂಡ ತಿಳಿಸಿದ್ದಾರೆ. ಉಡುಪಿಯ 42ರ ಹರೆಯದ ಪುರುಷರು ಕಿಡ್ನಿ, ಹೆಪಟೈಟಿಸ್ ಸಮಸ್ಯೆಗಳೊಂದಿಗೆ ಉಸಿರಾಟದ ತೊಂದರೆ ಯಿಂದಲೂ ಬಳಲುತಿದ್ದರು. ಅವರಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅದೇ ರೀತಿ ಕಾರ್ಕಳದ 73ರ ಹರೆಯದ ವೃದ್ಧರು ಸಹ ಕಿಡ್ನಿ ಹಾಗೂ ಹೃದಯ ಸಮಸ್ಯೆಯೊಂದಿಗೆ ಮಧುಮೇಹಕ್ಕೆ ಚಿಕಿತ್ಸೆಯಲ್ಲಿದ್ದು, ಪಾಸಿಟಿವ್ ಕಾಣಿಸಿ ಕೊಂಡಿತ್ತು. ಇವರು ರೋಗಕ್ಕೆ ಬಲಿಯಾಗಿದ್ದಾರೆ ಎಂದರು.