ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಿರುಕುಳ: ಪರಿಷತ್ ಸದಸ್ಯ ಮರಿತಿಬ್ಬೇಗೌಡ
ಬೆಂಗಳೂರು, ಆ.25: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಕೋವಿಡ್ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಆರೋಪಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆಯೆಂದು ಆರೋಪಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಶಿಕ್ಷಣ ಇಲಾಖೆಯ ಆಯುಕ್ತರು ತಮಗೆ ತೋಚಿದಂತಹ ಆದೇಶಗಳನ್ನು ಹೊರಡಿಸುತ್ತಿದ್ದಾರೆ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಾಕಷ್ಟು ಸಮಸ್ಯೆಯಾಗಿದೆ ಎಂದು ತಿಳಿಸಿದರು.
2019-20ರ ಆರ್‍ಟಿಇ ಬಾಕಿ ಹಣವನ್ನು ಪಾವತಿ ಮಾಡದ ಇಲಾಖೆಯ ಆಯುಕ್ತರು, ಉದ್ದೇಶಪೂರ್ವಕವಾಗಿ ಕಡಿತಗೊಳಿಸುತ್ತಿದ್ದಾರೆ. ಈ ಸಂಬಂಧ ಯಾವುದೇ ಸಮಜಾಯಿಷಿ ನೀಡದೆ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಹಾಗೂ ಇವರು ಕೈಗೊಂಡ ಹಲವು ತೀರ್ಮಾನಗಳು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಂಡುವಂತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಳೆದ ಎರಡು ತಿಂಗಳ ಹಿಂದೆ ಶಿಕ್ಷಣ ಸಚಿವ ಸುರೇಶ್‍ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಆದರೆ, ಸಚಿವರ ಯಾವುದೇ ತೀರ್ಮಾನ ಇಲ್ಲಿಯವರೆಗೂ ಜಾರಿಗೆ ಬಂದಿಲ್ಲ. ಹೀಗಾಗಿ ಇಂತಹ ಆಯುಕ್ತರು ಶಿಕ್ಷಣ ಇಲಾಖೆಗೆ ಅಗತ್ಯವಿಲ್ಲ. ಕೂಡಲೇ ಅವರನ್ನು ಬೇರೆಡೆ ವರ್ಗಾಯಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಶ್ರೀಕಂಠೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.







