ಕೈಗಾರಿಕಾ ಸ್ನೇಹಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಧೃಢ ಹೆಜ್ಜೆ: ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು, ಆ. 28: ಕರ್ನಾಟಕವನ್ನು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಧೃಡ ಹೆಜ್ಜೆಗಳನ್ನಿಟ್ಟಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಇಂದಿಲ್ಲಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಏರ್ಪಡಿಸಿದ್ದ ಒಂದು ವರ್ಷದ ಇಲಾಖೆಯ ಸಾಧನೆಯ ಸ್ಪಷ್ಟ ಗುರಿ ದಿಟ್ಟ ಕ್ರಮಗಳು ಪುಸ್ತಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದ ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಕರ್ನಾಟಕ ರಾಜ್ಯ ಕೈಗಾರಿಕಾ ಕ್ಷೇತ್ರದಲ್ಲಿ ಕಳೆದೊಂದು ವರ್ಷದಲ್ಲಿ ಅಮೂಲಾಗ್ರ ಬದಲಾವಣೆಯನ್ನು ಕಂಡಿದೆ. ಸೂಕ್ಷ್ಮ, ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಸರಳ ನಿಯಮಗಳ ಕಾನೂನು ಜಾರಿಗೊಳಿದ ಪ್ರಥಮ ರಾಜ್ಯ ನಮ್ಮದು ಎನ್ನುವ ಹೆಗ್ಗಳಿಕೆ ಪಾತ್ರವಾಗಿದೆ ಎಂದರು.
ಜನವರಿ ತಿಂಗಳಲ್ಲಿ ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ವಿಶ್ವದ ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಯಿತು. ಭೇಟಿಯ ಸಂದರ್ಭದಲ್ಲಿ ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಬದಲಾವಣೆಗಳ ಬಗ್ಗೆ ಕೈಗಾರಿಕೋದ್ಯಮಗಳಿಂದ ಸಲಹೆಗಳನ್ನು ಪಡೆದು ಸುಮಾರು 40ಕ್ಕೂ ಹೆಚ್ಚು ಸಂಘ ಸಂಸ್ಥೆಗಳು, ಉದ್ಯಮಗಳು ಮತ್ತು ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಮುಖಂಡರುಗಳನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.
ನೂತನ ಕೈಗಾರಿಕಾ ನೀತಿ-2020-25ರಲ್ಲಿ ಕರ್ನಾಟಕ ಕೈಗಾರಿಕಾ ಶಕ್ತಿ ಬಳಸಿಕೊಂಡು ಕೈಗಾರೀಕರಣಕ್ಕಾಗಿ ಪರಿಸರವನ್ನು ಶಕ್ತಿಗೊಳಿಸುವುದು. ಮೂಲಸೌಲಭ್ಯ ಅಭಿವೃಧ್ಧಿ, ರಾಜ್ಯದ ಜನರಿಗೆ ವಿಶೇಷವಾಗಿ ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಹಾಗೂ ಟಯರ್-2 ಮತ್ತು ಟಯರ್-3 ನಗರಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು ಹಾಗೂ ಬಂಡವಾಳ ಹೂಡಿಕೆಯ ಅಭಿವೃದ್ಧಿಯನ್ನು ರಾಜ್ಯದಲ್ಲಿ ಖಾತರಿಪಡಿಸಲಾಗುವುದು ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.
ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ ರಾಜ್ಯದಲ್ಲಿ 138 ಯೋಜನೆಗಳ ಮೂಲಕ 31,676.57 ಕೋಟಿ ರೂಪಾಯಿಗಳ ಬಂಡವಾವನ್ನು ರಾಜ್ಯದಲ್ಲಿ ಹೂಡಿಕೆ ಮಾಡಲು ವಿವಿಧ ಕಂಪೆನಿಗಳು ಮುಂದಾಗಿವೆ. ಇದರಿಂದಾಗಿ 65,459 ಉದ್ಯೋಗ ಸೃಷ್ಠಿಯಾಗಲಿವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







