ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆ.31ಕ್ಕೆ ಕೇಂದ್ರ ಅಧ್ಯಯನ ತಂಡ: ಸಚಿವ ಅಶೋಕ್

ಬೆಂಗಳೂರು, ಆ. 29: ರಾಜ್ಯದಲ್ಲಿನ ಭಾರಿ ಮಳೆ ಹಾಗೂ ನೆರೆ ಹಾವಳಿ ಹಿನ್ನೆಲೆಯಲ್ಲಿ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ತಂಡ ಆ.31ರ ಸೋಮವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಸ್ತು ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಗೃಹ ಇಲಾಖೆ ಕಾರ್ಯದರ್ಶಿ ಪ್ರತಾಪನ್ ನೇತೃತ್ವದ ಎರಡು ತಂಡ ಮೂರು ದಿನಗಳ ಕಾಲ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಲಿದೆ. ಖುದ್ದು ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಸಂಗ್ರಹಿಸಲಿದೆ ಎಂದು ಇದೇ ವೇಳೆ ವಿವರ ನೀಡಿದರು.
ಆ ಬಳಿಕ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚೆ ನಡೆಸಲಿದೆ. ಈಗಾಗಲೇ ರಾಜ್ಯಕ್ಕೆ ಹೆಚ್ಚಿನ ಮೊತ್ತದ ನೆರವು ನೀಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಅಧ್ಯಯನ ತಂಡ ವರದಿ ಸಲ್ಲಿಸಿದ ಬಳಿಕ ಅದನ್ನು ಆಧರಿಸಿ ರಾಜ್ಯಕ್ಕೆ ಕೇಂದ್ರ ಹಣಕಾಸಿನ ನೆರವು ನೀಡುವ ನಿರೀಕ್ಷೆ ಇದೆ ಎಂದು ಸಚಿವ ಅಶೋಕ್ ಇದೇ ಸಂದರ್ಭದಲ್ಲಿ ಸ್ಪಷ್ಟಣೆ ನೀಡಿದರು.
Next Story





