ಮೈಸೂರು ದಸರಾ- 2020: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ

ಬೆಂಗಳೂರು, ಸೆ. 3: ವಿಶ್ವವಿಖ್ಯಾತ ಇತಿಹಾಸ ಪ್ರಸಿದ್ಧ ನಾಡಹಬ್ಬ `ಮೈಸೂರು ದಸರಾ ಮಹೋತ್ಸವ-2020'ನೆ ಸಾಲಿನಲ್ಲಿ ಆಚರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ `ದಸರಾ ಉನ್ನತ ಮಟ್ಟದ ಸಮಿತಿ'ಯನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಚ್.ಕೆ.ಸುರೇಶ್ ಬಾಬು ಆದೇಶ ಹೊರಡಿಸಿದ್ದಾರೆ.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಹಾಗೂ ಡಾ.ಅಶ್ವತ್ಥ ನಾರಾಯಣ ಉಪಾಧ್ಯಕ್ಷರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಒಟ್ಟು 54 ಮಂದಿ ಸದಸ್ಯರಿದ್ದಾರೆ.
ಕಾರ್ಯಕಾರಿ ಸಮಿತಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅಧ್ಯಕ್ಷತೆಯಲ್ಲಿ ದಸರಾ ಕಾರ್ಯಕಾರಿ ಸಮಿತಿ ರಚನೆ ಮಾಡಲಾಗಿದ್ದು, ಮೈಸೂರು ಮೇಯರ್, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.





