ರಾಗಿಣಿ ವಿರುದ್ಧ ಪ್ರತ್ಯೇಕ ಎಫ್ಐಆರ್: ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು, ಸೆ.4: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ವಶಕ್ಕೆ ಪಡೆದ ವಿಚಾರಣೆ ನಡೆಸಲಾಗುತ್ತಿದ್ದು, ಸದ್ಯಕ್ಕೆ ಪ್ರತ್ಯೇಕ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಶುಕ್ರವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಗಿಣಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಸರ್ಚ್ ವಾರೆಂಟ್ ಪಡೆದು ನಟಿಯ ಮನೆ ಮೇಲೆ ದಾಳಿ ನಡೆಸಲಾಯಿತು. ಮನೆಯಲ್ಲಿ ರೇಡ್ ಮಾಡಿದ ವೇಳೆ ಏನೂ ಸಿಕ್ಕಿಲ್ಲ. ಹಾರ್ಡ್ ಡಿಸ್ಕ್ ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ ಜಪ್ತಿ ಮಾಡಿದ್ದೇವೆ ಎಂದು ಹೇಳಿದರು.
ಒತ್ತಡಗಳ ನಡುವೆ ನ್ಯಾಯಯುತವಾಗಿ ಕೆಲಸ ಮಾಡಲಾಗುತ್ತಿದೆ. ರವಿ ಮತ್ತು ರಾಹುಲ್‌ನನ್ನ ಬಂಧಿಸಿದ್ದು, ನಟಿ ರಾಗಿಣಿ ಸಂಬಂಧಿಸಿದಂತೆ ಸಿಸಿಬಿಯವರು ಇಂದು ಬೆಳಗ್ಗೆ ಅವರ ಮನೆಯಲ್ಲಿ ತಪಾಸಣೆ ಕೈಗೊಂಡಿದ್ದಾರೆ. ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ ಎಂದರು.
ಈವರೆಗೆ ಅವರನ್ನು ಬಂಧಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಅಧಿಕಾರಿಗಳು ತನಿಖೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.