ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸೆ.12ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಬೈಕ್ ರ‍್ಯಾಲಿ
ಬೆಂಗಳೂರು, ಸೆ.11: ಕೋವಿಡ್-19ರ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕರ್ನಾಟಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೆ.12ರಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಪ್ರಯೋಜಕತ್ವದಡಿ ಕರ್ನಾಟಕ ಟೂರಿಸಮ್ ಫೋರಂ ವತಿಯಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಫೋರಂನ ಉಪಾಧ್ಯಕ್ಷ ರವಿ ತಿಳಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನೇ ನಂಬಿಕೊಂಡು ಟ್ಯಾಕ್ಸಿ ಚಾಲಕರು, ಹೋಟೆಲ್ ಉದ್ಯೋಗಿಗಳು, ಗೈಡ್‍ಗಳು ಸೇರಿದಂತೆ ಲಕ್ಷಾಂತರ ಮಂದಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಹೀಗಾಗಿ ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿ ಅನ್ವಯ ಪ್ರವಾಸೋದ್ಯಮಕ್ಕೆ ಅವಕಾಶ ನೀಡಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಗರದ ಯುಬಿಸಿಟಿ ಮುಂಭಾಗದಿಂದ 25 ಸೂಪರ್ ಬೈಕ್‍ಗಳ ಮೂಲಕ ರ‍್ಯಾಲಿ ಪ್ರಾರಂಭಗೊಳ್ಳಲಿದೆ. ಮೈಸೂರಿಗೆ ಸಾಗುವ ಮಾರ್ಗಗಳಲ್ಲಿ ಬನ್ನಿ ನಮ್ಮೂರಿಗೆ ಎಂಬ ಹೆಸರಿನಡಿ ಸಾರ್ವಜನಿಕರನ್ನು ಪ್ರವಾಸಕ್ಕೆ ಆಹ್ವಾನಿಸುವಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.





